ದ.ಕ. ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.1ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ‘ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ 2019’ರ ಆಮಂತ್ರಣ ಪತ್ರಿಕೆ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಬಿಡುಗಡೆಗೊಂಡಿತು.
ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಪತ್ರಿಕಾ ಬರವಣಿಗೆ ಮೂಲಕ ನಾಡನ್ನು ತಿದ್ದುವ, ಜನರಲ್ಲಿ ತಿಳಿವಳಿಕೆ ಮೂಡಿಸುವ ಪತ್ರಕರ್ತರಿಗೆ ಇಂದು ರಕ್ಷಣೆ ಬೇಕಾಗಿದೆ. ಒಳ್ಳೆಯ ವಿಚಾರವನ್ನು ಸಮಾಜದ ಮುಂದಿಡುವ ಜತೆಗೆ ತಪ್ಪು ನಡೆದಾಗ ಎಚ್ಚರಿಸುವ ಕೆಲಸವನ್ನು ಪತ್ರಕರ್ತರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಪತ್ರಕರ್ತರ ಕೆಲಸಕ್ಕೆ ಪ್ರೋತ್ಸಾಹ ನೀಡುವ ಜತೆಯಲ್ಲಿ ಅವರಿಗೆ ಸಮಾಜದಲ್ಲಿ ರಕ್ಷಣೆ ನೀಡುವ ಕೆಲಸ ಅಗತ್ಯವಾಗಿ ನಡೆಯಬೇಕು. ಪತ್ರಕರ್ತರಿಗೆ ಭದ್ರತೆ, ಗೌರವ ನೀಡಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರ ಸಮ್ಮೇಳನ ಪೂರಕವಾಗಲಿ ಎಂದರು.
ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪಕುಮಾರ್ ಕಲ್ಕೂರ ಮಾತನಾಡಿ, ಮಂಗಳೂರು ಎಲ್ಲ ವಿಷಯದಲ್ಲಿ ಪ್ರಥಮ ಎನ್ನುವ ಹೆಗ್ಗಳಿಕೆ ಪಡೆದಿದೆ. ಪತ್ರಕರ್ತರ ಜಿಲ್ಲಾ ಮಟ್ಟದ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ಮೂಲಕ ರಾಷ್ಟ್ರಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಮಾದರಿ ಮತ್ತು ನಾಂದಿಯಾಗಲಿ. ಪತ್ರಕರ್ತರಿಗೆ ನಮ್ಮೆಲ್ಲರ ಪ್ರೋತ್ಸಾಹವಿದೆ. ಸಮ್ಮೇಳನಕ್ಕೂ ಸಹಕಾರ ನೀಡಲಾಗುವುದು. ಈ ಸಮ್ಮೇಳನ ರಾಷ್ಟ್ರಕ್ಕೆ ಹೊಸ ದಿಶೆ ನೀಡಲಿ ಎಂದು ಶುಭ ಹಾರೈಸಿದರು.
ಸಮ್ಮೇಳನದ ರೂಪುರೇಷೆ, ಕಾರ್ಯಕ್ರಮದ ವಿವರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾಹಿತಿ ನೀಡಿದರು. ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ , ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಸಮ್ಮೇಳನದ ಸಂಚಾಲಕ ಜಗನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯೆ ಸತ್ಯಾ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು