ಬುಲ್ಡೋಜರ್‌ ಕ್ರಮ ಕಾನೂನಿನ ಪ್ರಕಾರ ಇರಬೇಕು- ಯೋಗಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸುವಾಗ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದಿರುವ ಸುಪ್ರೀಂ ಕೋರ್ಟ್, ಈ ಕುರಿತು ದಿನಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಗುರುವಾರ ಸೂಚಿಸಿದೆ.

ಕಳೆದ ವಾರದ ಹಿಂಸಾಚಾರ ಪ್ರಕರಣದ ಆರೋಪಿಗಳ ಮನೆಗಳನ್ನು ಅಕ್ರಮವಾಗಿ ಕೆಡವಲಾಗಿದೆ ಎಂದು ಆರೋಪಿಸಿ, ಯೋಗಿ ಆದಿತ್ಯನಾಥ್ ಸರ್ಕಾರದ ಬುಲ್ಡೋಜರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ‘ಬುಲ್ಡೋಜರ್‌ನ ಕ್ರಮ ಕಾನೂನಿನ ಪ್ರಕಾರ ಇರಬೇಕು’ಎಂದು ಹೇಳಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಯೋಗಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರೆ, ಅರ್ಜಿದಾರರ ಪರ ವಕೀಲ ಸಿಯು ಸಿಂಗ್ ಇದಕ್ಕೆ ತಡೆ ನೀಡಬೇಕೆಂದು ಒತ್ತಾಯಿಸಿದರು.

ವಿಚಾರಣೆಯ ನಂತರ, ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ವೇಳೆ ಕಾನೂನಿನ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದರೊಂದಿಗೆ ಯುಪಿ ಸರ್ಕಾರ ಹಾಗೂ ಪ್ರಯಾಗ್‌ರಾಜ್ ಮತ್ತು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ಬಗ್ಗೆ 3 ದಿನಗಳಲ್ಲಿ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಎಲ್ಲವನ್ನೂ ನ್ಯಾಯಯುತವಾಗಿ ಕಾಣಬೇಕು ಎಂದು ಹೇಳಿ ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿಯು ಸಿಂಗ್, ಹಿಂಸಾಚಾರದಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳಲು ಬುಲ್ಡೋಜರ್ ಬಳಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಪದೇ ಪದೇ ಪ್ರತಿಭಟನೆಗಳು, ಹಿಂಸಾಚಾರಗಳು ನಡೆಯುತ್ತಿರುತ್ತವೆ. ಆದ್ದರಿಂದ ಕಟ್ಟಡಗಳನ್ನು ಧ್ವಂಸಗೊಳಿಸುವುದು ಆಘಾತಕಾರಿ ಮತ್ತು ಭಯಾನಕವಾಗಿದೆ ಎಂದು ಸಿಂಗ್ ವಾದಿಸಿದರು. ಈ ಕಟ್ಟಡಗಳು ತುರ್ತುಪರಿಸ್ಥಿತಿಯ ಕಾಲದಲ್ಲಾಗಲೀ, ಸ್ವಾತಂತ್ರ್ಯಪೂರ್ವದಲ್ಲಿಯಾಗಲೀ ನಿರ್ಮಿಸಿಲ್ಲ. ಇವು 20 ವರ್ಷಗಳಿಗೂ ಹೆಚ್ಚು ಕಾಲ ನಿಂತಿರುವ ಮನೆಗಳಾಗಿದ್ದು, ಕೆಲವೊಮ್ಮೆ ಆರೋಪಿಗಳಿಗೂ ಸೇರಿರುವುದಿಲ್ಲ. ಅವರ ವಯಸ್ಸಾದ ಪೋಷಕರಿಗೆ ಸೇರಿರುತ್ತವೆ ಎಂದು ವಾದಿಸಿದರು.

ಉತ್ತರ ಪ್ರದೇಶ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಜಹಾಂಗೀರ್ಪುರಿ ಧ್ವಂಸ ಪ್ರಕರಣದಲ್ಲಿ ಯಾರೂ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿಲ್ಲ. ಯುಪಿ ಸರ್ಕಾರದಿಂದ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದು ಹೇಳಿದರು. ಯಾರ ವಿರುದ್ಧವೂ ತಪ್ಪು ಕ್ರಮ ಕೈಗೊಂಡಿಲ್ಲ. ಸರ್ಕಾರ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿಲ್ಲ ಎಂದು ವಾದಿಸಿದರು.

Leave a Reply

Your email address will not be published. Required fields are marked *

error: Content is protected !!