ವೈದ್ಯಕೀಯ ಉಪಕರಣ ಖರೀದಿ ಹಗರಣ: ಪ್ರತಿಭಟನೆಗೆ ಕಾಂಗ್ರೆಸ್ ಸಿದ್ಧತೆ
ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೊರೋನಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ, ರಾಜ್ಯ ಸರ್ಕಾರ ಕೊರೋನಾ ನಿಯಂತ್ರಿಸಲು ಖರೀದಿಸಿದ ವೈದ್ಯಕೀಯ ಉಪಕರಣಗಳಲ್ಲಿ ಅವ್ಯವಹಾರ ನಡೆದಿದೆ. ಈ ಬಗ್ಗೆ ದಾಖಲೆ ಸಂಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ನಿರಂತರ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರ ಕೊರೋನಾ ನಿಯಂತ್ರಿಸಲು ಕೈಗೊಂಡ ಕ್ರಮಗಳ ಕುರಿತು ಹೈಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣಪತ್ರದ ಮಾಹಿತಿಯನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಹೆಚ್.ಕೆ.ಪಾಟೀಲ್ ಪಡೆದುಕೊಂಡಿದ್ದು, ಈ ಪ್ರಮಾಣಪತ್ರದ ಮಾಹಿತಿಯನ್ನಾಧರಿಸಿ ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಅಲ್ಲದೇ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಂಗ್ರಹಿಸಿರುವ ಮಾಹಿತಿ ವರದಿಯನ್ನು ಎಚ್ ಕೆ.ಪಾಟೀಲ್, ಕೆಪಿಸಿಸಿ ಟಾಸ್ಕ್ ಫೋರ್ಸ್ ಸಮಿತಿಗೆ ನೀಡಿದ್ದಾರೆ.
ಇನ್ನು ಮಾಜಿ ಸಚಿವ ಮುರುಗೇಶ್ ನಿರಾಣಿ ಪೆನ್‌ಡ್ರೈವ್ ವಿಚಾರದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.