ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ : ಪಕ್ಷ ಸಂಘಟನೆಗೆ ತೇಜಸ್ವಿನಿ ರಮೇಶ್ ಕರೆ
ಮಡಿಕೇರಿ : ಬಿಜೆಪಿ ಕಾರ್ಯಕರ್ತರು ಹಳ್ಳಿ, ಹಳ್ಳಿಗಳಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿ ಹೇಳುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಗೊಳಿಸುವಂತೆ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ರಮೇಶ್ ಕರೆ ನೀಡಿದ್ದಾರೆ.
ನಗರದ ಬಾಲಭವನದಲ್ಲಿ ನಡೆದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಎಲ್ಲಾ ಬೂತ್ಗಳಿಗೆ ತೆರಳಿ ಬಿಜೆಪಿ ಪಕ್ಷದ ಸದಸ್ಯತ್ವ ನೀಡಬೇಕು ಮತ್ತು ವಿಶ್ವದಲ್ಲೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿಯ ಸದಸ್ಯತ್ವ ಪಡೆಯುವುದೇ ಒಂದು ಹೆಮ್ಮೆ ಎಂದು ಜನರ ಮನವೊಲಿಸುವಂತೆ ಸಲಹೆ ನೀಡಿದರು.
ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಶ್ರಮ ವಹಿಸಿದ್ದರಿಂದ ಎರಡನೇ ಬಾರಿಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಪಡೆದಿದೆ ಎಂದು ಹೇಳಿದರು.ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಸದಸ್ಯತ್ವ ಸಂಖ್ಯೆ ಹೆಚ್ಚಾಗಬೇಕಿದೆ, ಪ್ರತಿ ಬೂತ್ನಲ್ಲಿ 25 ನೂತನ ಸದಸ್ಯತ್ವದ ಗುರಿ ಹೊಂದಲಾಗಿದೆ. ಎಲ್ಲಾ ಮಂಡಲದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಸದಸ್ಯತ್ವ ಅಭಿಯಾನಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕೇಂದ್ರ ಬಜೆಟ್ ದೇಶದ ಕಟ್ಟ ಕಡೆಯ ವ್ಯಕ್ತಿಗೂ ಉಪಯೋಗವಾಗಿ, ಬಡವ, ಮಧ್ಯಮ ವರ್ಗದ ಜನತೆಯಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಕೃಷಿಕರು, ಉದ್ಯಮಿಗಳಿಗೆ ಹೆಚ್ಚು ಉಪಯುಕ್ತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ದೇಶ ಕಟ್ಟುವ ಚಿಂತನೆಯಡಿ ಪ್ರಧಾನಿ ಮೋದಿ ಅವರ ನಾಯಕತ್ವದ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ಸಂಘಟನಾ ಶಕ್ತಿ ಬೂತ್ ಮಟ್ಟದಲ್ಲಿ ಗಟ್ಟಿಯಾಗಬೇಕೆಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್ ಮತ್ತಿತರ ಪ್ರಮುಖರು ಹಾಜರಿದ್ದರು.