ದೀಪ ಬೆಳಗೋ ನೆಪದಲ್ಲಿ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್: ಪೊಲೀಸ್ ಆಯುಕ್ತ ಎಚ್ಚರಿಕೆ
ಬೆಂಗಳೂರು: ಯಾವುದೇ ವ್ಯಕ್ತಿ ನಿಯಂತ್ರಣ ಕ್ರಮ ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ಕಾಯ್ದೆ ಅಡಿ ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಹಚ್ಚಲು ಕರೆನೀಡಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಆಯುಕ್ತರು, ಮನೆಯಿಂದ ಯಾರೂ ಹೊರಗೆ ಬರಬಾರದು. ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿದ್ದು , ನಗರದಲ್ಲಿ ಗುಂಪು ಸೇರುವುದು ನಿಷೇಧಿಸಲಾಗಿದೆ.
ಹೀಗಾಗಿ ಮನೆಯ ಮುಂದೆ, ಬಾಲ್ಕನಿಯಲ್ಲೇ ಸಾಮಾಜಿಕ ಅಂತರ ಕಾಯ್ದುಕೊಂಡು ದೀಪ ಬೆಳಗಿಸಿ. ಮನೆಯಿಂದ ಯಾರೂ ಹೊರಗೆ ಬರಬೇಡಿ ಎಂದು ಮನವಿ ಮಾಡಿದ ಅವರು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ದೀಪ ಬೆಳಗಿಸುವುದು ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದು, ಪಟಾಕಿ ಹಚ್ಚುವುದು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಯಾವುದೇ ವ್ಯಕ್ತಿ ನಿಯಂತ್ರಣ ಕಾಯ್ದೆ ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005,ಕಲಂ-51ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಕಲಂ-188 ರೀತ್ಯಾ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ