ಪೌರತ್ವ ಪ್ರತಿಭಟನೆ: ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ, ಸಾವಿನ ಸಂಖ್ಯೆ 15ಕ್ಕೇರಿಕೆ
ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿರುವುದಾಗಿ ವರದಿಗಳು ತಿಳಿಸಿವೆ.
ಪ್ರತಿಭಟನೆ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಹಿಮ್ಮೆಟ್ಟಿಸುತ್ತಿರುವ ವೇಳೆ ವಾರಣಾಸಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ 8 ಬಾಲಕನೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಇನ್ನು ಮೀರುತ್ ಜಿಲ್ಲೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.
ಶುಕ್ರವಾರ ಪ್ರಾರ್ಥನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಈ ವೇಳೆ ಹಲವು ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ.
ಇನ್ನು ಕೆಲವೆಡೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿದ್ದಾರೆ. ಘರ್ಷಣೆ ವೇಳೆ 6 ಮಂದಿ ಪೊಲೀಸರಿಗೂ ಗುಂಡಿನ ಗಾಯಗಳಾಗಿದ್ದು, ಈ ಪೈಕಿ ಓರ್ವ ಪೊಲೀಸ್ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬಿಜ್ನೋರ್, ಸಂಭಾಲ್, ಫಿರೋಜಾಬಾದ್, ಕಾನ್ಪುರ, ವಾರಣಾಸಿ ಹಾಗೂ ಮೀರುತ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು ವರದಿಗಳು ತಿಳಿಸಿವೆ.