ಅಧಿಕಾರಕ್ಕಾಗಿ ಬಿಜೆಪಿ ವಾಮಮಾರ್ಗ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ: ರಾಜ್ಯದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ, ಅಧಿಕಾರ ಹಿಡಿಯಬೇಕೆನ್ನುವ ದುರಾಸೆಯಿಂದ ಬಿಜೆಪಿ ಕುದುರೆ ವ್ಯಾಪಾರಕ್ಕೆ ಇಳಿದಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದ ಗಾಂಧಿ ಮಂಟಪದ ಎದುರು ಪ್ರತಿಭಟನೆ ನಡೆಸಲಾಯಿತು.

ಜ.ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ಅಧಿಕಾರವನ್ನು ಹಿಡಿಯುವ ಹಟದಲ್ಲಿ ಬಿಜೆಪಿ ವಾಮಮಾರ್ಗವನ್ನು ಅನುಸರಿಸುತ್ತಿದೆ. ಇದನ್ನು ರಾಜ್ಯದ ಜನತೆ ಸಹಿಸುವುದಿಲ್ಲವೆಂದ ಪಕ್ಷದ ಪ್ರಮುಖರು ಈ ರೀತಿಯ ರಾಜಕಾರಣಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾಂಗ್ರೆಸ್ಸಿಗರು ಅಲ್ಲಿ ಮಾನವ ಸರಪಳಿ ರಚಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ,  ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಬಿಜೆಪಿ ಸರ್ಕಾರ ಕುದುರೆ ವ್ಯಾಪಾರ ಮಾಡುವ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಿ ತಾವು ಅಧಿಕಾರಕ್ಕೇರಬೇಕೆಂದು ಬಿಜೆಪಿ ವಾಮಮಾರ್ಗಕ್ಕೆ ಇಳಿದಿರುವುದು ಖಂಡನೀಯ ಎಂದರು.

ಪ್ರಜಾಸತ್ತಾತ್ಮಕವಾಗಿ ರೂಪುಗೊಂಡ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸಿ, ಅಧಿಕಾರ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ, ಮೈತ್ರಿ ಸರ್ಕಾರ ಬಲಿಷ್ಟವಾಗಿದ್ದು, ಉರುಳುವ ಸಾಧ್ಯತೆಯೇ ಇಲ್ಲ. ಇನ್ನಾದರೂ ಬಿಜೆಪಿ ತನ್ನ ಕೆಟ್ಟ ಚಾಳಿಯನ್ನು ಬಿಟ್ಟು, ಮೈತ್ರಿ ಸರ್ಕಾರದ ಆಡಳಿತಕ್ಕೆ ತೊಡಕನ್ನುಂಟು ಮಾಡದಿರಲಿ ಎಂದು ಒತ್ತಾಯಿಸಿದರು.

ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *

error: Content is protected !!