10 ಮಂದಿಯ ಜೊತೆ ನಮ್ಮ ಅರ್ಜಿಯನ್ನೂ ಪರಿಗಣಿಸಿ – ಸುಪ್ರೀಂ ಮೆಟ್ಟಿಲೇರಿದ ಐವರು ಶಾಸಕರು

ಬೆಂಗಳೂರು: ಮೈತ್ರಿ ನಾಯಕತ್ವದ ಮೇಲೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿ ಮುಂಬೈನಲ್ಲಿದ್ದ 10 ಶಾಸಕರು ರಾಜೀನಾಮೆಯನ್ನು ಪರಿಗಣಿಸುವಂತೆ ಸೂಚನೆ ನೀಡಲು ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೆ ಐವರು ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈಗಾಗಲೇ 10 ಶಾಸಕರ ರಾಜೀನಾಮೆ ಕುರಿತ ಅಫಿಡವಿಟ್ ಸಲ್ಲಿಕೆ ಮಾಡಿದ್ದ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಂಗಳವಾರದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿತ್ತು. ಸದ್ಯ ಕಾಂಗ್ರೆಸ್ ಶಾಸಕರಾದ ರೋಷನ್ ಬೇಗ್, ಎಂಟಿಬಿ ನಾಗರಾಜ್, ಡಾ.ಕೆ.ಸುಧಾಕರ್, ಆನಂದ್ ಸಿಂಗ್, ಮುನಿರತ್ನ ಅವರು ಕೂಡ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಿರುವುದರಿಂದ ಇವರ ಅರ್ಜಿಯನ್ನು ಇದೇ ವೇಳೆ ಪರಿಗಣಿಸುವ ಸಾಧ್ಯತೆ ಇದೆ.

ಶಾಸಕರ ಮನವಿಯೇನು?: ಈ ಹಿಂದೆ 10 ಶಾಸಕರು ತಮ್ಮ ಅಫಿಡವಿಟ್‍ನಲ್ಲಿ ಪ್ರಸ್ತಾಪಿಸಿದ್ದ ಅಂಶಗಳನ್ನೇ ಈ ಐವರು ಕೂಡ ಪ್ರಸ್ತಾಪ ಮಾಡಿದ್ದಾರೆ. ನಿಯಮಾವಳಿಯಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆದರೆ ಇದುವರೆಗೂ ನಮ್ಮ ರಾಜೀನಾಮೆಯನ್ನು ಪರಿಗಣಿಸಿಲ್ಲ. ಅನಗತ್ಯವಾಗಿ ಸಮಯ ವ್ಯರ್ಥ ಮಾಡಲಾಗುತ್ತಿದೆ. ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಕಾರಣಕ್ಕಾಗಿ ಸ್ವ-ಇಚ್ಛೆಯಿಂದಲೇ ರಾಜೀನಾಮೆ ಸಲ್ಲಿಸಿದ್ದೇವೆ. ನಮ್ಮ ರಾಜೀನಾಮೆಯನ್ನು ಅಂಗೀಕಾರ ಮಾಡುವಂತೆ ಸ್ಪೀಕರ್ ಅವರಿಗೆ ನಿರ್ದೇಶಿಸಬೇಕು ಎಂದು ಅಫಿಡವಿಟ್‍ನಲ್ಲಿ ಮನವಿ ಮಾಡಿದ್ದಾರೆ.
ಅತೃಪ್ತ ನಾಯಕರ ಮನವೊಲಿಕೆಗೆ ಈಗಾಗಲೇ ದೋಸ್ತಿ ನಾಯಕರು ತೀವ್ರ ಪ್ರಯತ್ನ ನಡೆಸುತ್ತಿರುವುದರಿಂದ ಶಾಸಕರ ನಡೆ ಅಚ್ಚರಿ ಮೂಡಿಸಿದೆ. ಸಚಿವ ಎಂಟಿಬಿ ನಾಗರಾಜ್ ಅವರು ಮನವೊಲಿಕೆ ಸಂಬಂಧ ಯಾವುದೇ ಸ್ಪಷ್ಟ ಆಶ್ವಾಸನೆಯನ್ನು ನೀಡಿಲ್ಲ. ಪರಿಣಾಮ ಮಂಗಳವಾರ ನ್ಯಾಯಾಲಯ ಯಾವ ಅಭಿಪ್ರಾಯ ವ್ಯಕ್ತಪಡಿಸಲಿದೆ ಎಂಬುದು ಕೂಡ ತೀವ್ರ ಕುತೂಹಲ ಮೂಡಿಸಿದೆ. 10 ಶಾಸಕರ ಜೊತೆ ಮತ್ತೆ ಈ ಶಾಸಕರ ಅರ್ಜಿಯನ್ನು ಪರಿಗಣಿಸುತ್ತಾ ಎಂಬುದು ಕೂಡ ಕುತೂಹಲ ಮೂಡಿಸಿದೆ. ಆದರೆ ಈಗಾಗಲೇ ರಾಜೀನಾಮೆ ನೀಡಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಮಾತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿಲ್ಲ ಎಂಬ ಮಾಹಿತಿ ಸಿಕ್ಕಿದೆ.