ಕೊರೋನಾ: ಸಾವಿನ ಸಂಖ್ಯೆ 8ಕ್ಕೆ, 400 ಕ್ಕೇರಿದ ಸೋಂಕು ಪೀಡಿತರು
ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮುಂಬೈನಲ್ಲಿ ಮತ್ತೊಬ್ಬ ವ್ಯಕ್ತಿಯೊಬ್ಬರು ವೈರಸ್’ಗೆ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಸೋಂಕು ಪೀಡಿತರ ಸಂಖ್ಯೆ 400ಕ್ಕೆ ಏರಿಕೆ.
ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಿಲಿಪ್ಪೀನ್ಸ್ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಮಹಾರಾಷ್ಟ್ರದಲ್ಲಿ ಮತ್ತೆ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ, ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ.
ನಿನ್ನೆಯಷ್ಟೇ ದೇಶದಾದ್ಯಂತ ಜನತಾ ಕರ್ಫ್ಯೂ ಆಚರಿಸಲಾಗಿದ್ದು, ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಆದರೂ ಈ ನಡುವಲ್ಲೂ ವೈರಸ್’ಗೆ ಭಾನುವಾರ ಮೂವರು ಬಲಿಯಾಗಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಕೇವಲ 24 ಗಂಟೆಗಳಲ್ಲಿ 15 ಮಂದಿಯಲ್ಲಿ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಮಹಾರಾಷ್ಟ್ರದಲ್ಲಿ ಈ ವರೆಗೂ 89 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.