ಕೊರೊನಾ ವೈರಸ್ ಭೀತಿ: 7, 8 9ನೇ ತರಗತಿ ಪರೀಕ್ಷೆ ಮುಂದೂಡಿದ ಸರಕಾರ
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಓರ್ವ ವ್ಯಕ್ತಿಯನ್ನು ಬಲಿಪಡೆದುಕೊಂಡಿರುವ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ರಾಜ್ಯಾದಾದ್ಯಂತ ಕೊರೊನಾ ವೈರಸ್ ಭೀತಿ ಉಂಟಾಗಿರುವುದರಿಂದಾಗಿ 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತುರ್ತು ಪ್ರಕಟಣೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಈಗಾಗಲೇ 1ರಿಂದ 6ನೇ ತರಗತಿವರೆಗೆ ರಜೆ ಘೋಷಿಸಲಾಗಿದ್ದು, ಪರೀಕ್ಷಾ ಪೂರ್ವ ಸಿದ್ಧತಾ ರಜೆಯಲ್ಲಿರುವ 7ರಿಂದ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ತಿಳಿಸಲಾಗಿತ್ತು. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದರಿಂದ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಂಭವವಿರುವುದರಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ 7ರಿಂದ 9ನೇ ತರಗತಿವರೆಗಿನ ಪರೀಕ್ಷೆಯನ್ನು ಮಾರ್ಚ್ 31ರವರೆಗೆ ಮುಂದೂಡಲಾಗಿದೆ . ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಘೋಷಿಸಲಾಗುವುದು. ಆದರೆ 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಗಿದಿಯಂತೆ ಮಾರ್ಚ್ 27ರಿಂದ ಏಪ್ರಿಲ್ 9ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಆಯಾ ದಿನಗಳಂದು ಮಾತ್ರ ವಿದ್ಯಾರ್ಥಿಗಳು ಹಾಜರಾಗುವಂತೆ ಹೇಳಲಾಗಿದೆ. |