ಕರ್ನಾಟಕ ಲಾಕ್‌ಡೌನ್‌ ಬಗ್ಗೆ ಸಂಜೆ ನಿರ್ಧಾರ

ಬೆಂಗಳೂರು: (ಉಡುಪಿ ಟೈಮ್ಸ್ ವರದಿ) ಕೋವಿಡ್‌ 19 ಮಹಾಮಾರಿ ರಾಜ್ಯದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ರಾಜ್ಯವನ್ನೇ ಲಾಕ್‌ಡೌನ್‌ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಅಧಿಕ್ರತ ಮಾಹಿತಿ ಸಂಜೆ ಹೊರಬೀಳುವ ಸಾಧ್ಯತೆ ಇದೆ.

ಮಂಗಳವಾರದಿಂದ ಮಾರ್ಚ್ 31ರವರೆಗೆ ಲಾಕ್‍ಡೌನ್ ಮಾಡಲು ಸರ್ಕಾರ ಮುಂದಾಗಿದ್ದು, ವಾಣಿಜ್ಯ ಅಂಗಡಿಗಳು ಸಂಪೂರ್ಣ ಬಂದ್ ಆಗಲಿದೆ. ಮುಖ್ಯಮಂತ್ರಿಗಳ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇವತ್ತು ಸಂಜೆ ವಿಪಕ್ಷ ನಾಯಕರ ಸಭೆ ಬಳಿಕ ಅಧಿಕೃತವಾಗಿ ಸಿಎಂ ನಿರ್ಧಾರ ಪ್ರಕಟಿಸಲಿದ್ದಾರೆ.

ಇಂದು ಸಿಎಂ ತುರ್ತು ಸುದ್ದಿಗೋಷ್ಠಿ ನಡೆಸಿದ್ದು, ಮಾಚ್ 31ರವರೆಗೂ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‍ಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದು ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ. ಅಂಗಡಿ ಮುಂಗಟ್ಟುಗಳು ಕ್ಲೋಸ್ ಆಗಿರುತ್ತವೆ. ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿರುತ್ತವೆ. ಹಾಲು, ತರಕಾರಿ, ಹಣ್ಣು, ಆಸ್ಪತ್ರೆ, ಮೆಡಿಕಲ್ ಶಾಪ್ ಓಪನ್ ಇರುತ್ತದೆ. ಖಾಸಗಿ ವಾಹನಗಳು ಸೇರಿದಂತೆ ಎಲ್ಲವೂ ರಸ್ತೆಯಲ್ಲಿ ಓಡಾಡುವಂತಿಲ್ಲ. ವಾಣಿಜ್ಯ ಅಂಗಡಿಗಳು ಫುಲ್ ಬಂದ್ ಆಗಲಿವೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆ ವೈದ್ಯರ ಜೊತೆ ಸಾಕಷ್ಟು ಚರ್ಚೆ ಆಗಿದೆ. ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನ ಹುಡುಕಿ ಕ್ವಾರಂಟೈನ್ ಮಾಡುವುದೇ ದೊಡ್ಡ ಸವಾಲಾಗಿದೆ. ಗಂಭೀರತೆ ಅರಿತು ಸ್ವಯಂ ಪ್ರೇರಣೆಯಿಂದ ಮನೆಯಲ್ಲಿರಬೇಕು. ನಗರ ಪ್ರದೇಶದ ಜನ ಗ್ರಾಮೀಣ ಪ್ರದೇಶಕ್ಕೆ ಹೋಗಿ ಅಲ್ಲಿ ತೊಂದರೆ ಮಾಡಬೇಡಿ. ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಮುಂದುವರಿಯುತ್ತದೆ. ಬಡವರಿಗೆ ಮಾತ್ರ ದಿನಪೂರ್ತಿ ಉಚಿತ ಊಟ ಕೊಡಲಾಗುತ್ತದೆ. ಇಂದಿರಾ ಕ್ಯಾಂಟಿನ್‍ನಲ್ಲಿ ಬಡವರಿಗೆ ಉಚಿತ ಊಟವನ್ನು ನೀಡಲಾಗುತ್ತದೆ ಎಂದರು. 

Leave a Reply

Your email address will not be published. Required fields are marked *

error: Content is protected !!