ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ : ಸರ್ಕಾರಿ ಶಾಲೆಗಳ ಉಳಿವಿಗಾಗಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಘಟಕ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ನಗರದ ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡ ಶಿಕ್ಷಕರು ಇತ್ತೀಚಿನ ವರ್ಷಗಳಲ್ಲಿ ಸರ್ಕಾರ ಮತ್ತು ಇಲಾಖೆಯ ಅಧಿಕಾರಿಗಳು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಿಕ್ಷಕರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಮತ್ತು ಸರಕಾರಿ ಶಾಲೆಗಳನ್ನು ಉಳಿಸುವ ದಿಸೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲೂ ಎಲ್‌ಕೆಜಿ ಮತ್ತು ಯುಕೆಜಿಯನ್ನು ಆರಂಭಿಸಬೇಕು. ಆ ಮೂಲಕ ಸಮಾಜದ ಬಡವರ್ಗದ ಮಕ್ಕಳು ಕೂಡ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯಲು ಅವಕಾಶ ಮಾಡಿಕೊಡಬೇಕು. ಇದು ಜಾರಿಗೆ ಬಂದಲ್ಲಿ ಮುಂದಿನ ವರ್ಷಗಳಲ್ಲಿ ರಾಜ್ಯದಲ್ಲಿ ಖಾಸಗಿ ಶಾಲೆಗಳೇ ಇಲ್ಲದಂತಾಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ಸಕಾಲದಲ್ಲಿ ಒದಗಿಸುವಲ್ಲೂ ಸರ್ಕಾರ ವಿಫಲವಾಗಿದೆ. ಪರಿಣಾಮವಾಗಿ ಪ್ರಾಥಮಿಕ ಶಾಲಾ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ಹೊತ್ತೊಯ್ಯುವಂತಾಗಿದ್ದು, ಸರ್ಕಾರ ನಮ್ಮನ್ನು ಕೂಲಿ ಕಾರ್ಮಿಕರಿಗಿಂತಲೂ ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆಯೆಂದು ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯೇ ಆಯಾ ಶಾಲೆಗಳಿಗೆ ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡುವಂತಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಸ್.ಚೇತನ್ ಮಾತನಾಡಿ ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶದ ಅನ್ವಯ 2004 ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರು ಪದವೀಧರರಾಗಿದ್ದರು ಕೂಡ 1 ರಿಂದ 5 ನೇ ತರಗತಿವರೆಗೆ ಮಾತ್ರ ಬೋಧಿಸಲು ಅರ್ಹರೆಂದು ತಿಳಿಸಿ, ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಇದರಿಂದಾಗಿ ಮುಂದಿನ ವರ್ಷಗಳಲ್ಲಿ ಶೇ. 50 ರಷ್ಟು ಪ್ರಾಥಮಿಕ ಶಾಲಾ ಶಿಕ್ಷಕರು ಹೆಚ್ಚುವರಿ ಶಿಕ್ಷಕರೆಂದು ಪರಿಗಣಿಸಲ್ಪಡುವ ಸಾಧ್ಯತೆ ಇದ್ದು, ಇದರಿಂದಾಗಿ ಉದ್ಯೋಗವನ್ನೇ ಕಳೆದುಕೊಳ್ಳುವ ಭೀತಿ ಎದುರಾಗಿದೆಯೆಂದು ಆತಂಕ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!