ಇಹಲೋಕ ತ್ಯಜಿಸಿದ ಗುರುವರ್ಯನಿಗೆ ಉಡುಪಿಯಿಂದ ವಿದಾಯ
ಬೆಂಗಳೂರು: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಪಾರ್ಥೀವ ಶರೀರವನ್ನು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಎಚ್ ಎಎಲ್ ವಿಮಾನ ನಿಲ್ದಾಣ ಕರೆತರಲಾಗಿದೆ.
ಹೆಲಿಕಾಪ್ಟರ್ ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ಮತ್ತು ವಾಯು ಸೇನಾ ಸಿಬ್ಬಂದಿ ಉಪಸ್ಥಿತರಿದ್ದರು. ಶ್ರೀಗಳ ಪಾರ್ಥೀವ ಶರೀರವನ್ನು ಕೇಸರಿ ಪೆಟ್ಟಿಗೆಯಲ್ಲಿ ತರಲಾಗಿದೆ.
ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಭಕ್ತಾಧಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಂಬಿ ಪಾಟೀಲ್, ಮತ್ತಿತರ ನಾಯಕರು ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ಸಂಜೆ 5.30ರ ವೇಳೆಗೆ ಪಾರ್ಥಿವ ಶರೀರವನ್ನು ವಿದ್ಯಾಪೀಠಕ್ಕೆ ತರಲಾಗುವುದು. ರಾತ್ರಿ 8 ಗಂಟೆಯ ಒಳಗೆ ಬೃಂದಾವನ ನಿರ್ಮಾಣದ ವಿಧಿವಿಧಾನಗಳು ಮುಕ್ತಾಯವಾಗಲಿದೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.
ಬಂದೋಬಸ್ತ್ ಮತ್ತು ಸಂಚಾರ ನಿರ್ವಹಣೆಗಾಗಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. 460 ಸಂಚಾರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದ್ಯಾಪೀಠದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಯಾವ ವಾಹನಕ್ಕೂ ಪ್ರವೇಶವಿಲ್ಲ ಎಂದು ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ಹೇಳಿದರು.
ಸಂಜೆ 6 ಗಂಟೆಗೆ ವಿದ್ಯಾಪೀಠದಲ್ಲಿ ಪೇಜಾವರ ಮಠದ ಕಿರಿಯ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ ಎಂದು ವಿದ್ಯಾಪೀಠದ ವ್ಯವಸ್ಥಾಪಕರಾದ ಕೇಶವ ಆಚಾರ್ಯ ತಿಳಿಸಿದರು.