ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಿ, ಇಲ್ಲದಿದ್ದರೆ ಅವಧಿ ವಿಸ್ತರಣೆ: ಬಿಎಸ್‌ವೈ ಎಚ್ಚರಿಕೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ರಾಜ್ಯದ ಜತೆಗೆ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಅವಧಿ ವಿಸ್ತರಣೆಯಾಗಬಹುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ಜನತೆಗೆ ಎಚ್ಚರಿಸಿದ್ದಾರೆ.
ರಾಜ್ಯದ ನಿವಾಸಿಗಳು ಮನೆಯಲ್ಲೇ ಇದ್ದು ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಬೇಕು. ಆಗ ಮಾತ್ರ ಏಪ್ರಿಲ್ 14ಕ್ಕೆ ಲಾಕ್ ಡೌನ್ ಮುಗಿಯುತ್ತದೆ. ಇಲ್ಲದಿದ್ದರೆ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಸಿಎಂ ಹೇಳಿದ್ದಾರೆ.
ಲಾಕ್ ಡೌನ್ ಇದ್ದರು ರಾಜ್ಯದ ಜನತೆ ರಸ್ತೆಗಳಲ್ಲಿ ಓಡಾಡುತ್ತಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್ ಯಡಿಯೂರಪ್ಪನವರಿಗೆ ತರಾಟೆ ತೆಗೆದುಕೊಂಡಿದ್ದರು. ಇದಾದ ನಂತರ ಯಡಿಯೂರಪ್ಪನವರು ಜನರು ರಸ್ತೆಗಿಳಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕರ್ನಾಟಕದ ಜನತೆ ಶಿಸ್ತಿಗೆ ಮತ್ತು ಕಾನೂನು ಪಾಲನೆಗೆ ಹೆಸರಾದವರು. ಕರ್ನಾಟಕ ಒಂದು ಕಲ್ಯಾಣ ರಾಜ್ಯ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿರುತ್ತದೆ. ಕೊರೋನಾ ವೈರಸ್ ನಮ್ಮ ತಾಳ್ಮೆಯನ್ನು ಪರೀಕ್ಷಿಸಲೆಂದೇ ಬಂದ ಒಂದು ವಿಪತ್ತು ಎಂದು ಭಾವಿಸಿದ್ದೇನೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ 21 ದಿನಗಳ ಕಾಲ ಲಾಕ್‍ಡೌನ್ ವಿಧಿಸಿರುವ ಅನಿವಾರ್ಯ ಪರಿಸ್ಥಿತಿಯಿಂದಾಗಿ ಇಡೀ ದೇಶದ ಜನತೆಯ ಕ್ಷಮೆಯನ್ನು ಕೇಳಿದ್ದಾರೆ. ಒಬ್ಬ ಪ್ರಧಾನಮಂತ್ರಿ ದೇಶದ ಜನತೆಯ ಕ್ಷಮೆ ಕೇಳುವ ಅನಿವಾರ್ಯತೆ ಇದೆಯೆಂದರೆ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
ದೇಶಕ್ಕೆ ಯಾಕೆ ಜಗತ್ತಿನ ಇತಿಹಾಸದಲ್ಲಿಯೇ ಇಂತಹ ಪರಿಸ್ಥಿತಿ ಬಂದಿರಲಿಲ್ಲ. ಈಗ ಇಂತಹ ಪರಿಸ್ಥಿತಿ ಬಂದಿದೆ ಎಂದರೆ ಅದನ್ನು ನಾವು ಎದುರಿಸಲೇಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಆರ್ಥಿಕ ಪರಿಸ್ಥಿತಿಯ ಮೇಲೆ ತೀವ್ರತರವಾದ ಪರಿಣಾಮ ಈ ವೈರಾಣು ಬೀರಲಿದೆ ಎಂದು ಗೊತ್ತಿದ್ದರೂ ದೇಶವನ್ನು ಲಾಕ್‍ಡೌನ್ ಮಾಡುವಂತಹ ಕಠಿಣ ನಿರ್ಧಾರ ತೆಗೆದುಕೊಂಡಿದ್ದು ದೇಶದ ಜನತೆಯ ಹಿತದೃಷ್ಟಿಯಿಂದಲೇ ಹೊರತು ಯಾವುದೇ ಸ್ವಹಿತಾಸಕ್ತಿಯಿಂದಲ್ಲ. ಅಭಿವೃದ್ಧಿ ಹೊಂದಿದ ದೇಶಗಳ ಸಾಧನೆ ಕೋವಿಡ್-19 ನ್ನು ನಿಯಂತ್ರಿಸುವಲ್ಲಿ ಶೋಚನೀಯವಾಗಿರುವಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುನ್ನೆಚ್ಚರಿಕೆ ಕ್ರಮಗಳು ಫಲಿತಾಂಶವನ್ನು ನೀಡುತ್ತಿವೆ ಮತ್ತು ದೇಶವು ಅವರ ಮತ್ತು ಅವರ ದೂರದೃಷ್ಟಿಯ ಬಗ್ಗೆ ಹೆಮ್ಮೆ ಪಡುವಂತೆ ಮಾಡುತ್ತಿದೆ. ನಾವು ಅವರ ಕೆಲಸದ ಬಗ್ಗೆ ಮೆಚ್ಚುಗೆ ಮತ್ತು ಹೆಮ್ಮೆ ಪಡುವುದು ಮಾತ್ರವಲ್ಲದೇ ಅವರ ಆಜ್ಞೆಯನ್ನು ಪಾಲಿಸುವಲ್ಲಿ ನಮ್ಮ ಗೌರವ ಅಡಗಿದೆ. ಜಾಗೃತ ನಾಗರಿಕರಾದ ನಾವೆಲ್ಲ ಪ್ರಧಾನಮಂತ್ರಿಯವರ ಈ ದಿಟ್ಟ ನಿಲುವನ್ನು ಮತ್ತು ನಿರ್ಧಾರವನ್ನು ಬೆಂಬಲಿಸಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಕೆಲವು ನಗರ ಪ್ರದೇಶಗಳಲ್ಲಿನ ಜನತೆ ಕರ್ಫ್ಯೂ ಧಿಕ್ಕರಿಸಿ ರಸ್ತೆಗಳಲ್ಲಿ ಓಡಾಡುವುದು ಮಾಡುತ್ತಿದ್ದಾರೆ. ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಬೆಲೆ ಕೊಡಿ ಮತ್ತು ಲಾಕ್‍ಡೌನ್ ಪಾಲಿಸಬೇಕು. ಪೊಲೀಸರು ಕೂಡ ನಿಮ್ಮ ಹಿತವನ್ನೇ ಬಯಸುವವರು. ಅವರೇನು ನಿಮ್ಮ ವೈರಿಗಳಲ್ಲ. ಪೊಲೀಸರಿಗೆ ಅನಿವಾರ್ಯತೆಯನ್ನು ಸೃಷ್ಟಿಸಬೇಡಿ.
ಇನ್ನೂ 16 ದಿನಗಳು ನಿಮ್ಮ ಮನೆಯಲ್ಲಿಯೇ ಇರಬೇಕು. ಮನೆಯವರೊಂದಿಗೆ ಕಾಲ ಕಳೆಯಲು ನಿಮಗೆ ಒದಗಿ ಬಂದ ಒಂದು ಸದಾವಕಾಶ ಎಂದು ಭಾವಿಸಿಕೊಳ್ಳಬೇಕು. ನೀವು ಎಷ್ಟು ಮನೆಯ ಒಳಗಡೆ ಇರುತ್ತೀರೋ ಅದರಿಂದ ನಿಮಗೆ ಮತ್ತು ದೇಶಕ್ಕೆ ಒಳ್ಳೆಯದಾಗುತ್ತದೆ. ಪುಸ್ತಕಗಳನ್ನು ಓದಿರಿ ಬಡವರು ಕೂಡ ನೀವಿದ್ದ ಸ್ಥಳದಲ್ಲಿಯೇ ಸಕಾರಾತ್ಮಕ ಸದಾಕಾಲ ಚಟುವಟಿಕೆಗಳಲ್ಲಿ ಕಾಲ ಕಳೆಯಿರಿ ಎಂದು ಅವರು ಸಲಹೆ ನೀಡಿದ್ದಾರೆ.