ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಕುರಿತು ತನಿಖೆ: ದಿನಕರ ಬಾಬು

ಉಡುಪಿ: ಕಾರ್ಮಿಕರಿಗೆ ನೀಡುವ ಸ್ಮಾರ್ಟ್‍ಕಾರ್ಡ್ ನೊಂದಣಿ
ಮಾಡಲು ನಿಯೋಜಿಸಿರುವ ಸಂಸ್ಥೆಯು, ಕಾರ್ಮಿಕರಿಂದ ತಲಾ 75 ರೂ ಪಡೆದಿದ್ದು, ಒಂದು ವರ್ಷ ಆದರೂ ಕಾರ್ಡ್ ವಿತರಣೆ ಆಗದಿರುವ ಕುರಿತು ಸೂಕ್ತ ತನಿಖೆ ನಡೆಸಿ ಕಾರ್ಮಿಕರಿಗೆ ಕಾರ್ಡ್ ವಿತರಿಸುವ ವ್ಯವಸ್ಥೆ ಆಗಬೇಕು ಹಾಗೂ ಹಣ ದುರುಪಯೋಗ ಆಗಿದ್ದಲ್ಲಿ ನೌಕರರ ಹಣ ವಾಪಾಸು ನೀಡುವ ವ್ಯವಸ್ಥೆ ಆಗಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ವತ್ತೂರು ಭಾಗದಲ್ಲಿ ನೆರೆ ಪ್ರದೇಶವಾಗಿದ್ದು, ನೀರು ಹರಿದು ಹೋಗಲು ಚರಂಡಿ ಮಾಡಿಕೊಡುವಂತೆ ಕೇಳಿದ್ದರೂ ಈವರೆಗೂ ಯಾವುದೇ ಕಾಮಗಾರಿ ಆರಂಭವಾಗದೇ ಇದ್ದು, ಶೀಘ್ರದಲ್ಲಿ ಚರಂಡಿ ವ್ಯವಸ್ಥೆ ಮಾಡಿಕೊಡುವಂತೆ ಅಧ್ಯಕ್ಷರು ಸೂಚಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಗ್ರಾಮ ಪಂಚಾಯತ್ ಗಮನಕ್ಕೆ ತರಬೇಕು ಎಂದು ಕಳೆದ ಸಭೆಯಲ್ಲಿ ತಿಳಿಸಿದ ಬಳಿಕವೂ, ಅಧಿಕಾರಿಗಳು ಈ ವಿಷಯವನ್ನು ಪಾಲನೆ ಮಾಡದಿರುವ ಬಗ್ಗೆ ಸಭೆಯಲ್ಲಿ ಜಿ.ಪಂ. ಪಂಚಾಯತ್ ಸದಸ್ಯರು ಆಕ್ಷೇಪಿಸಿದ್ದು, ಇದಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ.ರೂಪೇಶ್ ಪ್ರತಿಕ್ರಿಯಿಸಿ, ಈ ವಿಷಯವಾಗಿ ಕಟ್ಟು ನಿಟ್ಟಿನ ನಿಯಮ ಪಾಲನೆ ಮಾಡುವಂತೆ ಎಲ್ಲಾ ಗ್ರಾಮ ಪಂಚಾಯತ್‍ಗೆ ತಿಳಿಸಲಾಗಿದೆ ಎಂದರು. ಪರ್ಕಳ ಹೆದ್ದಾರಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿರುವ ಬಗ್ಗೆ ಹಿರಿಯಡ್ಕ ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ರಂಜನ್ ಕೇಲ್ಕರ್ ಪ್ರಸ್ತಾಪಿಸಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿ ಪ್ರತಿಕ್ರಿಯಿಸಿ, ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, 2 ತಿಂಗಳಲ್ಲಿ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು. ಇದೇ ವೇಳೆ ಹಿರಿಯಡ್ಕ ಕಸ ವಿಲೇವಾರಿ ಘಟಕ ನಿರ್ಮಾಣದ ಅಗತ್ಯತೆ ಕುರಿತು ಚರ್ಚಿಸಿದ್ದು, ಇದಕ್ಕೆ
ಅಧ್ಯಕ್ಷರು ಪ್ರತಿಕ್ರಿಯಿಸಿ, ಶೀಘ್ರದಲ್ಲಿ ಕೆಲಸ ಆರಂಭಿಸುವಂತೆ ಸೂಚನೆನೀಡಿದರು.
ಕೊಕ್ಕರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟಂಬೈಲು ಪ್ರದೇಶದಲ್ಲಿ 2 ಕೋಟಿ ರೂ.
ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಕಾಮಗಾರಿ ಸ್ಥಳ ಪರಿಶೀಲನೆ ನಡೆದಿದ್ದು, ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ಸದಸ್ಯರು ಆಕ್ಷೇಪಿಸಿದ್ದು, ಈ ಕುರಿತಂತೆ ಇದೇ ತಿಂಗಳ 31 ರ ಒಳಗೆ ತಾಂತ್ರಿಕ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧ್ಯಕ್ಷರಿಗೆ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ತಾಕೀತು ಮಾಡಿದರು.

ಹಾವಂಜೆ ಕಿಳಿಂಜೆ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಈ ಬಗ್ಗೆ ಸದಸ್ಯ ಜನಾರ್ದನ ತೋನ್ಸೆ ಸಭೆಯಲ್ಲಿ ಪ್ರಸ್ತಾಪಿಸಿದ್ದು, ಸಂಬಂಧಪಟ್ಟ ಅಧಿಕಾರಿ 2 ತಿಂಗಳಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬಸ್‍ಗಳ ಅಲಭ್ಯತೆ ಕುರಿತು ಮಾಹಿತಿ ಪಡೆದ ಅಧ್ಯಕ್ಷರು, ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಸೌಲಭ್ಯದ ಅಗತ್ಯತೆಯನ್ನು ಮನಗಂಡು ಬಸ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಡಿಪೋ ಮ್ಯಾನೇಜರ್ ಬಳಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದರು.
ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಒಟ್ಟಾರೆ 26 ಬಾಲಕರ ಹಾಗೂ 22
ಬಾಲಕೀಯರ ಶೌಚಾಲಯಗಳ ನಿರ್ಮಾಣವಾಗಬೇಕಿದೆ ಎಂದು ಸದಸ್ಯರು ಪ್ರಸ್ತಾಪಿಸಿದ್ದು, ಅಕ್ಟೋಬರ್ 2 ರೊಳಗೆ ಎಲ್ಲಾ ಶಾಲೆಗಳು ಶೌಚಾಲಯಗಳನ್ನು ನಿರ್ಮಿಸಿ ಈ ಬಗ್ಗ ಮಾಹಿತಿ ನೀಡುವಂತೆ ಹಾಗೂ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾ ಗಣಪತಿ ದೇವಸ್ಥಾನ ಬಳಿಯ ರಸ್ತೆಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ದಿನಕರ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!