ಕರ್ನಾಟಕ ಬಂದ್: ಕಲ್ಲು ತೂರಾಟ,ಬಿಗಿ ಬಂದೋಬಸ್ತ್
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಬೇಕೆಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ ರಾಜ್ಯಾದಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಸರೋಜಿನಿ ಮಹಿಷಿ ವರದಿ ಆಧರಿಸಿ ರಾಜ್ಯದಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು. ಅನ್ಯ ರಾಜ್ಯದ ವಲಸಿಗರ ಪಾಲಾಗುತ್ತಿರುವ ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಟ್ಟು ಸ್ಥಳೀಯರ ನಿರುದ್ಯೋಗ ಸಮಸ್ಯೆ ನಿವಾರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟವು ಕಳೆದ 100 ದಿನಗಳಿಂದ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಡಿದೆ.
ಹೋರಾಟದ ನೂರನೇ ದಿನದ ಅಂಗವಾಗಿ ರಾಜ್ಯಾದ್ಯಂತ ಬಂದ್’ಗೆ ಕರೆ ನೀಡಿರುವ ಒಕ್ಕೂಟದ ಅಧ್ಯಕ್ಷ ಕನ್ನಡ ಚಳವಳಿ ನಾಗೇಶ್, ಸರ್ಕಾರವು ಕೂಡಲೇ ಸ್ಥಳೀಯರಿಗೆ ಉ ದ್ಯೋಗ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
ನಗರದ ಮೈಸೂರು ಬ್ಯಾಂಕ್ ಸರ್ಕಲ್, ಪರಂಗಿಪೇಟೆ ಸೇರಿದಂತೆ ಹಲವೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪರಂಗಿಪೇಟೆಯಲ್ಲಿ ಕೆಲ ಪ್ರತಿಭಟನಾಕಾರರು ಬಸ್ ಗಳಿಗೆ ಕಲ್ಲು ತೂರಾಟ ನಡೆಸಿದ್ದು, ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಿರುವ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ 180 ರೌಡಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಮೈಸೂರು ಬ್ಯಾಂಕ್ ಸರ್ಕರಲ್ ನಲ್ಲಿ ಬಸ್ ತಡೆಯಲು ಹೋರಾಟಗಾರರು ಯತ್ನ ನಡೆಸಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿವೆ ಎಂದು ತಿಳಿದುಬಂದಿದೆ.
ಬಂದ್ ಹಿನ್ನೆಲೆಯಲ್ಲಿ ರಾಜ್ಯದ ಸೂಕ್ಷ್ಮ ಪ್ರದೇಶಗಳಾದ ಟೌನ್ ಹಾಲ್, ಮೆಜೆಸ್ಟಿಕ್, ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರಸ್ತೆ, ಕೆಆರ್, ಸರ್ಕಲ್, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ರಾಜ್ಯದಾದ್ಯಂತ ಬಂದ್ ಆಚರಣೆ ಇದ್ದರೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿಲ್ಲ. ಇನ್ನು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಕುಲಪತಿಗಳ ಸೂಚನೆಯಂತೆ ಪರೀಕ್ಷೆಗಳನ್ನು ಮುಂದೂಡಿ ವಿವಿಯ ಮೌಲ್ಯಮಾಪನ ಕುಲ ಸಚಿವ ಪ್ರೊ.ಎಂ.ಶಿವರಾಜು, ಮುಂದೂಡಿರುವ ಪರೀಕ್ಷೆಗಳಿಗೆ ಬದಲೀ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.