ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್: ಮಾಜಿ ಶಾಸಕ ಸಭಾಪತಿ ಹರ್ಷ
ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆಯ್ಕೆಯನ್ನು ಉಡುಪಿಯ ಮಾಜಿ ಶಾಸಕ ಯು.ಆರ್. ಸಭಾಪತಿ ಸ್ವಾಗತಿಸಿದ್ದು, ಇವರ ಸಾರಥ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ.
ದೇಶದ ಯಾವುದೇ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಮಸ್ಯೆ ಎದುರಾದರೇ ಅದನ್ನು ಇವರ ನೈಪುಣ್ಯತೆಯಿಂದಲೇ ಸರಿಪಡಿಸಿಕೊಂಡು ಪಕ್ಷವನ್ನು ಮುನ್ನಡೆಸಿಕೊಂಡು ಬಂದಿರುವ ಡಿಕೆಶಿ ಅವರ ವ್ಯಕ್ತಿತ್ವ ಅರಿತು ಎಐಸಿಸಿ ಕರ್ನಾಟಕ ರಾಜ್ಯದ ಮಹತ್ತರ ಜವಾಬ್ದಾರಿಯನ್ನು ನೀಡಿದೆ ಇದನ್ನು ಸಮರ್ಥವಾಗಿ ನಿಭಾಯಿಸುವ ಆಶಾಭಾವನೆ ಇದೆ ಎಂದು ಮಾಜಿ ಶಾಸಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರುಗಳಾಗಿ ಆಯ್ಕೆಯಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್ ಇವರ ನೇಮಕವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸ್ವಾಗತಿಸಿದೆ. ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಡಿ.ಕೆ.ಶಿ.ಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠಗೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಅವರು ಪ್ರತಿಕ್ರಿಯಿಸಿದ್ದಾರೆ.