ಯುವ ಜನತೆಯಲ್ಲಿ ಸಮರ್ಪಣಾ ಮನೋಭಾವ ಮೂಡಲಿ: ಕೋಟ

ಉಡುಪಿ: ಯುವಜನಾಂಗ ಸಮರ್ಪಣಾ ಮನೋಭಾವದಿಂದ ರಾಷ್ಟ್ರಕ್ಕಾಗಿ ದುಡಿದರೆ, ದೇಶ ಅಭಿವೃದ್ದಿ ಹೊಂದಲು ಸಾಧ್ಯ ಎಂದು ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲ ಸಾರಿಗೆ, ಜಿಲ್ಲಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಶನಿವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ರಾಷ್ಟ್ರೀಯ ಸೇವಾ ಯೋಜನಾ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಯುವಜನೋತ್ಸವ 2019-2020 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾಭ್ಯಾಸ ಮುಗಿಸಿದ ಯುವಜನತೆಗೆ ಸೂಕ್ತ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ,
ಯುವಜನಾಂಗಕ್ಕೆ ಉದ್ಯೋಗ ನೀಡುವಂತಹ ಗುರುತರ ಜವಬ್ದಾರಿ ಸರ್ಕಾರದ ಮೇಲಿದೆ. ಆದರೆ ರಾಜ್ಯದ ಒಟ್ಟು ಅಂಕಿ ಅಂಶಗಳಲ್ಲಿ ಶೇ. 1 ಕ್ಕಿಂತ ಹೆಚ್ಚು ಸರ್ಕಾರಿ ಉದ್ಯೋಗ ದೊರಕಲು ಸಾಧ್ಯವಿಲ್ಲ. ಹೀಗಾಗಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಸ್ವಯಂ ಉದ್ಯೋಗ ಆರಂಭಿಸುವಂತೆ ತಿಳಿಸಿದ ಸಚಿವರು, ನಿರುದ್ಯೋಗಿಗಳಿಗೆ ಖಾಸಗಿ ವಲಯದಲ್ಲಿ ಉದ್ಯೋಗವನ್ನು ದೊರಕಿಸಿಕೊಡುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಜಿಲೆಯಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿಕೊಂಡು ಮಾದಕ ದ್ರವ್ಯಗಳ ಮಾರಾಟದ ಗುಂಪು ಸೃಷ್ಠಿಯಾಗಿದ್ದು, ಈ ಗುಂಪು ಅಮಾಯಕ ವಿದ್ಯಾರ್ಥಿಗಳನ್ನು ಮಾದಕ ವ್ಯಸನಿಯನ್ನಾಗಿಸಿ ಪರಿವರ್ತಿಸುವ ವ್ಯವಸ್ಥೆಯನ್ನು ಮಾಡಿಕೊಂಡಿದೆ.

ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ಅಧಿಕಾರಿಗಳು ಹಾಗೂ ಸಂಬಂಧ ಪಟ್ಟ ಇಲಾಖೆ ಮಾದಕ ದ್ರವ್ಯ ಮಾರಾಟ ಮಾಡುವ ಜಾಲವನ್ನು ಶೀಘ್ರದಲ್ಲಿ ಹತ್ತಿಕ್ಕಬೇಕು ಎಂದು ಜಿಲ್ಲಾಡಳಿಕ್ಕೆ ಸೂಚನೆ ನೀಡಿದರು. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವವರ ಮಾಹಿತಿ ಸಿಕ್ಕ ಕೂಡಲೇ ಪೊಲೀಸ್ ಹಾಗೂ ಜಿಲ್ಲಾಧಿಕಾರಿಗೆ ಮಾಹಿತಿ ನೀಡುವಂತೆ ಯುವಜನತೆಗೆ ಸಚಿವ ಪೂಜಾರಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಯುವಜನ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಪಾಲ್ಗೊಂಡು ಕಾರ್ಯಕ್ರಮದ ಪ್ರಯೋಜನಗಳನ್ನು ಹಾಗೂ ಕಾರ್ಯಕ್ರಮವನ್ನು ಯಶಸ್ವಿಯಾಗಲು ಸಹಕರಿಸಬೇಕು.

ಇಂತಹ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.ಜಿಲ್ಲಾ ಪಂಚಾಯತ್‍ನ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ತಾಲೂಕು ಪಂಚಾಯತ್ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ನಿತ್ಯಾನಂದ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರಾಜೇಂದ್ರ ಕೆ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!