ಮಂಗಳೂರು: ಪೊಲೀಸರ ಗುಂಡಿನ ದಾಳಿಗೆ ಇಬ್ಬರ ಗಂಭೀರ, ಕಲ್ಲು ತೂರಾಟ, ಕರ್ಫ್ಯೂ ಜಾರಿ
ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನ ನಿರತರ ಮೇಲೆ ಬಂದರ್ ಸಮೀಪ ಪೊಲೀಸರ ಗುಂಡಿಗೆ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ,
ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರಿನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಚ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಪೊಲೀಸರು ಉದ್ರಿಕ್ತರನ್ನು ಚದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಬಂದರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮೊದಲು ಅಶ್ರುವಾಯು ಪ್ರಯೋಗಿಸಲಾಗಿತ್ತು. ಆದರೆ ಅದಕ್ಕೂ ಉದ್ರಿಕ್ತ ಗುಂಪು ಬಗ್ಗದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿಲಾಗಿದೆ. ಆದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರಿನ ಐದು ಕಡೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಬಂದರು, ಪಾಂಡೇಶ್ವರ, ಬರ್ಕೆ, ಹಂಪನಕಟ್ಟೆ ಹಾಗೂ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಲಾಠಿ ಪ್ರಹಾರ ನಡೆದ ಪರಿಣಾಮ ನಗರದಾದ್ಯಂತ ವಾಹನ ದಟ್ಟಣೆ ಉಂಟಾಗಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ರಾವ್ ಆ್ಯಂಡ್ ರಾವ್ ವೃತ್ತದಲ್ಲಿ ಪೊಲೀಸರು ಕೆಲ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸಿದರು. ಜಿಲ್ಲೆಯಲ್ಲಿ ನಿಷೇದಾಜ್ಞೆ ನಡುವೆಯೂ ಕೆಲ ಕಿಡಿಗೇಡಿಗಳು ನಗರ ಮಧ್ಯಭಾಗದ ಬಲ್ಮಠದ ಶಾಂತಿ ನಿಲಯ ಆವರಣದ ಆಲದ ಮರಕ್ಕೆ ಬೆಂಕಿ ಹಚ್ಚಿದ್ದರು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ ನಿಷೇಧಿಸಿ ಹಾಕಿದ್ದ 144 ಸೆಕ್ಷನ್ ಉಲ್ಲಂಘಿಸಿ, ಕೆಲ ಯುವಕರು ಮೆರವಣಿಗೆ ನಡೆಸಲು ಯತ್ನಿಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಮಧ್ಯಾಹ್ನ ಆಗುತ್ತಿದ್ದಂತೆ ಯುವಕರು ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದ ಬಳಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದಾಗಿ ಪೊಲೀಸರು ಸ್ಟೇಟ್ ಬ್ಯಾಂಕ್ ವೃತ್ತದ ಬಳಿ ಸೇರಿದ್ದ ಸಾರ್ವಜನಿಕರನ್ನು ಹೊರಗೆ ಕಳುಹಿಸಿದರು.ಈ ವೇಳೆ ಮನವಿ ಲೆಕ್ಕಿಸದೆ ಮುನ್ನುಗ್ಗಿದ ಯುವಕರ ಮೇಲೆ ಪೊಲೀಸರು ಲಾಠಿ ಪ್ರಯೋಗ ಮಾಡಿದ್ದಾರೆ. ಆದರೆ ಲಾಠಿಗೆ ಪ್ರತಿಯಾಗಿ ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರತಿಭಟನಾಕಾರರು ಬೀಸಿದ ಕಲ್ಲುಗಳು ತಾಗಿ ಕೆಲ ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಯುವಕರು ಪ್ರತಿಭಟನೆ ಮುಂದುವರಿಸಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ
ನಿಷೇಧಾಜ್ಞೆ ಹೊರತಾಗಿಯೂ ಕೆಲ ಮುಸ್ಲಿಂ ಸಂಘಟನೆ ಪ್ರತಿಭಟನೆಗೆ ಯತ್ನಿಸಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹೀಗಾಗಿ ಮಂಗಳೂರಿನ ಸರ್ವಿಸ್ ಬಸ್ ನಿಲ್ದಾಣ, ಸ್ಟೇಟ್ ಬ್ಯಾಂಕ್ ವೃತ್ತ, ಹಂಪನಕಟ್ಟೆ ವೃತ್ತ ಸಂಪೂರ್ಣ ಸ್ಥಗಿತವಾಗಿದೆ. ಕೆಲ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್ ಹರ್ಷ ನಗರದ ಆಯಕಟ್ಟಿನ ಪ್ರದೇಶಗಳಿಗೆ ತೆರಳಿ, ಬಂದೋಬಸ್ತ್ ನೋಡಿಕೊಂಡಿದ್ದರು. ಮಧ್ಯಾಹ್ನ ಕಮಿಷನರೇಟ್ ಕಚೇರಿಗೆ ಮುತ್ತಿಗೆ ಹಾಕುವ ಸಂದೇಶ ಹರಿದಾಡಿದ ಹಿನ್ನೆಲೆಯಲ್ಲಿ ಗನ್ ಪಾಯಿಂಟ್ ನಿರ್ಮಾಣವೂ ನಡೆದಿತ್ತು. ಇಷ್ಟಾದರೂ, ಉದ್ರಿಕ್ತ ಕೆಲವು ಯುವಕರು ಪ್ರತಿಭಟನೆ ನಡೆಸಿಯೇ ಸಿದ್ಧ ಎನ್ನುವಂತೆ ನುಗ್ಗಿ ಬಂದಿದ್ದು ವಿಕೋಪಕ್ಕೆ ತಿರುಗುವಂತಾಗಿದೆ. ಸದ್ಯಕ್ಕೆ ಮಂಗಳೂರಿನ ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್ ವೃತ್ತ, ಹಳೆ ಬಂದರು ಪ್ರದೇಶ ಸಂಪೂರ್ಣ ಬಂದ್ ಆಗಿವೆ. ಕಟ್ಟಡಗಳಲ್ಲಿ ಅಡಗಿ ನಿಂತು ಕಲ್ಲು ತೂರಾಟ ನಡೆಸಿದ ಗುಂಪನ್ನು ಅಶ್ರುವಾಯು ಮೂಲಕ ಚದುರಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ, ಉದ್ರಿಕ್ತ ಯುವಕರನ್ನು ಓಡಿಸುವ ಪ್ರಯತ್ನ ಮಾಡಿದ್ದಾರೆ.