ಮಂಗಳೂರು : ಜಿಲ್ಲೆಯಾದ್ಯಂತ ಮತ್ತೆ ಎರಡು ದಿನಗಳ ಹೈ ಅಲರ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಆರ್ಭಟ ಮುಂದುವರಿದಿದ್ದು ಜಿಲ್ಲೆಯಾದ್ಯಂತ ಮತ್ತೆ ಹೈ ಅಲರ್ಟ್ ಘೋಷಿಸಲಾಗಿದೆ.
ಆ. 7 ರಿಂದ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಜನತೆ ಎಚ್ಚರಿಕೆಯಿಂದ ಇರಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಎಚ್ಚರಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಇಂದು ಮುಂಗಾರು ಮತ್ತಷ್ಟು ಚುರುಕುಗೊಂಡ ಪರಿಣಾಮ ಈಗಾಗಲೇ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ, ಮರ ಧರೆಗುರುಳುತ್ತಿದ್ದು , ನದಿಗಳ ಉಕ್ಕಿ ಹರಿಯುತ್ತಿದೆ.
ಕಡಲಿನಲ್ಲಿ ಪ್ರಕ್ಷುಬ್ದಗೊಂಡಿದ್ದು ತೂಫಾನ್ ಏಳುವ ಸಾಧ್ಯತೆ ಇರುವುದರಿಂದ ಕಡಲಿಗೆ ಮೀನುಗಾರಿಕೆಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಕಡಲತೀರದಲ್ಲಿ ಕಡಲ್ಕೊರೆತ ಉಂಟಾಗುವ ಸಾಧ್ಯತೆ ಇದ್ದು, ಕಡಲ ತೀರವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.