ಜ.22ಕ್ಕೆ ನಿರ್ಭಯಾ ಅತ್ಯಾಚಾರಿಗಳನ್ನು ನೇಣಿಗೇರಿಸಲು ಕೋರ್ಟ್ ಆದೇಶ!

ನವದೆಹಲಿ: 2012ರ ದೆಹಲಿಯ ನಿರ್ಭಯಾ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಜನವರಿ 22 ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸಬೇಕೆಂದು ದೆಹಲಿಯ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. ಈ ಮೂಲಕ 7 ವರ್ಷದ ಕಾನೂನು ಸಮರಕ್ಕೆ ಕೊನೆಗೂ ಜಯ ಸಿಕ್ಕಿದೆ. ಈ ತೀರ್ಪಿನಿಂದಾಗಿ ನನ್ನ ಮಗಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ನನ್ನ ಮಗಳಿಗೆ ಮಾತ್ರವಲ್ಲ ದೇಶದ ಪ್ರತಿಯೊಬ್ಬ ಮಹಿಳೆಯರಿಗೂ ಇಂದು ನ್ಯಾಯ ಸಿಕ್ಕಿದಂತಾಗಿದೆ. ಪ್ರಕರಣದ ನಾಲ್ವರು ಅಪರಾಧಿಗಳಿಗೆ ನೀಡಿದ ಡೆತ್ ವಾರೆಂಟ್ ನಿಂದ ಜನಕ್ಕೆ ನ್ಯಾಯಾಂಗದ ವ್ಯವಸ್ಥೆಯ ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ನಿರ್ಭಯಾ ತಾಯಿ ಆಶಾದೇವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಆದರೆ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆ ಆತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು.

ಆದರೆ ಆತನ ಕ್ಷಮದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿತ್ತು. ಅಲ್ಲದೆ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರಪತಿಗಳಿಗೂ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿತ್ತು. ಗಲ್ಲು ಶಿಕ್ಷೆ ಜಾರಿಯಾಗುತ್ತಿದ್ದಂತೆ ಅಕ್ಷಯ್ ಸಿಂಗ್ ಸುಪ್ರೀಂ ಕೋರ್ಟಿನಲ್ಲಿ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದ. ಆದರೆ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿತ್ತು.
2012ರಲ್ಲಿ ನಡೆದಿದ್ದ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅತ್ಯಾಚಾರಿಗಳ ವಿರುದ್ಧ ಸಾರ್ವಜನಿಕರು ಹೋರಾಟ, ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತನ್ನಿ ಎಂಬ ಕೂಗು ಕೇಳಿಬಂದಿತ್ತು 

Leave a Reply

Your email address will not be published. Required fields are marked *

error: Content is protected !!