ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಲಾ ಪೂರ್ವ ಶಿಕ್ಷಣ ತರಬೇತಿ
ಮಡಿಕೇರಿ: ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಕಲಿಕೆಯೊಂದಿಗೆ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸಿದಲ್ಲಿ ಭವಿಷ್ಯದ ಕಲಿಕೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಅರುಂದತಿ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮೈಸೂರಿನ ಪ್ರಥಮ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ಸ್ತ್ರೀ ಶಕ್ತಿ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ನಡೆದ ಶಾಲಾ ಪೂರ್ವ ಶಿಕ್ಷಣ ತರಬೇತಿ ಕಾರ್ಯಗಾರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪುಟ್ಟ ಮಕ್ಕಳಿಗೆ ಶಿಕ್ಷಣ ನೀಡುವ ಮೊದಲು ಅವರ ಮನಸ್ಸನ್ನು ಭಾವನಾತ್ಮಕವಾಗಿ, ಬೌದ್ಧಿಕವಾಗಿ ಹಾಗೂ ಮಾನಸಿಕವಾಗಿ ಅರಿತುಕೊಂಡು ತಯಾರಿ ನಡೆಸುವುದು ಸೂಕ್ತವೆಂದರು.
ಸಹ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಪಿ.ಸವಿತಾ ಮಾತನಾಡಿ, ಖಾಸಗಿ ವಿದ್ಯಾಸಂಸ್ಥೆಗಳು ನೀಡುವ ಪೂರ್ವ ಶಿಕ್ಷಣಕ್ಕೆ ಸರಿಸಮಾನವಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಾಗಾರ ನಡೆಸುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.