ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ
ಕೊಡಗು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತ್ತೆ ವರುಣ ಅಬ್ಬರಿಸುತ್ತಿದ್ದಾನೆ. ಬಿಟ್ಟು ಬಿಡದೆ ಆರ್ಭಟಿಸುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ. 204 ಮಿಲಿ ಮೀಟರ್ ಗಿಂತ ಅಧಿಕ ಮಳೆಯಾಗುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ಧಾರಾಕಾರ ಮಳೆಗೆ ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತವಾಗಿದೆ. ಭಾಗಮಂಡಲ- ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕರಾವಳಿ ಭಾಗದಲ್ಲೂ ವರುಣ ಅಬ್ಬರಿಸುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇತ್ತ ಮೇಘಸ್ಫೋಟಕ್ಕೆ ವಾಣಿಜ್ಯ ನಗರಿ ಮುಂಬೈನಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ ಮುಂಬೈ, ಥಾಣೆಯಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಮಳೆಯಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.