‘ಸಿದ್ದರಾಮಯ್ಯ ನನ್ನ ಮೊದಲ ಶತ್ರು’ – ಎಚ್ ಡಿ ಕೆ
ಬೆಂಗಳೂರು:ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ನೇರ ಹೊಣೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಆರೋಪಿಸಿದ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೂಡಾ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಸ್ಛಾನದಿಂದ ತಮ್ಮನ್ನು ಕೆಳಗಿಳಿಸಲು ಕುತಂತ್ರ ರಾಜಕಾರಣ ಮಾಡಿರುವ ಸಿದ್ದರಾಮಯ್ಯ ಅವರೇ ನನ್ನ ಮೊದಲ ಶತ್ರು, ಬಿಜೆಪಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ವೆಬ್ ಸೈಟ್ ವೊಂದಕ್ಕೆ ನೀಡಿರುವ ಸಂದರ್ಶದಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದಾರೆ. ಸಿದ್ದರಾಮಯ್ಯ ತಮ್ಮ ಆಪ್ತ ಶಾಸಕರನ್ನು ಮೈತ್ರಿ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಮೂಲಕ ಪತನಕ್ಕೆ ಕಾರಣವಾಗಿದ್ದಾರೆ. ಮೈತ್ರಿ ಸರ್ಕಾರ ಮುಂದುವರೆಸಬೇಕೆಂದು ಕಾಂಗ್ರೆಸ್ ಹೈಕಮಾಂಡ್ ನ ಆಶಯವಾಗಿದ್ದರೂ ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಪ್ರತಿನಿತ್ಯ ಸರ್ಕಾರವನ್ನು ಪತನಗೊಳಿಸಲು ಪ್ರಯತ್ನಿಸಿದರು, ಶಾಸಕರ ರಾಜೀನಾಮೆಗೂ ಸಿದ್ದರಾಮಯ್ಯ ನೇರ ಕಾರಣ ಎಂದು ಆರೋಪಿಸಿದ್ದಾರೆ.
ಮೈತ್ರಿ ಸರ್ಕಾರದ ಅವಧಿಯಲ್ಲಿ ನಾನು ಮುಖ್ಯಮಂತ್ರಿಯಾಗಿರಲಿಲ್ಲ. ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡುತ್ತಿದೆ . ಕಾಂಗ್ರೆಸ್ ನನ್ನ ಮೇಲೆ ಸವಾರಿ ಮಾಡಿತ್ತು. ಜಿಲ್ಲಾಧಿಕಾರಿ ವರ್ಗಾವಣೆ ಸೇರಿದಂತೆ ಎಲ್ಲ ವರ್ಗಾವಣೆಗಳನ್ನು ಕಾಂಗ್ರೆಸ್ ನವರು ಹೇಳಿದಂತೆ ಮಾಡಬೇಕಾಗಿತ್ತು ಎಂದು ತಮ್ಮ ಮನದಾಳದ ಆಕ್ರೋಶವನ್ನು ಹೊರಹಾಕಿದ್ದಾರೆ.
ಪೋನ್ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಿಬಿಐ ತನಿಖೆಗೆ ವಹಿಸಿರುವುದರ ಹಿಂದೆ ಸಿದ್ದರಾಮಯ್ಯ ಅವರ ಕೈವಾಡವಿದೆ. ಅತೃಪ್ತ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಲು ಸಿದ್ದರಾಗಿದ್ದರೂ ಅದಕ್ಕೆ ಸಿದ್ದರಾಮಯ್ಯ ಅವರೇ ಅವಕಾಶ ನೀಡಲಿಲ್ಲ. ಸಿದ್ದರಾಮಯ್ಯ ಉದ್ದೇಶಪೂರ್ವಕವಾಗಿಯೇ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ಸರ್ಕಾರವನ್ನು ಪತನಗೊಳಿಸಿದ್ದಾರೆ.ಒಂದು ವೇಳೆ ಯಡಿಯೂರಪ್ಪ ಸರ್ಕಾರ ನಡೆಸಲು ವಿಫಲರಾಗಿ ಸರ್ಕಾರ ಬಿದ್ದುಹೋದರೆ ಮತ್ತೆ ತಾವೇ ಮುಖ್ಯಮಂತ್ರಿಯಾಗುವ ಲೆಕ್ಕಾಚಾರದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.