ಉತ್ತಮ ಪರಿಸರಕ್ಕಾಗಿ ಪ್ಲಾಸ್ಟಿಕ್ ಬಳಕೆಯಿಂದ ದೂರವಿರಿ : ಜಿಲ್ಲಾಧಿಕಾರಿ ಸಲಹೆ
ಮಡಿಕೇರಿ: ಉತ್ತಮ ಪರಿಸರಕ್ಕಾಗಿ ಗಿಡ ನೆಡುವುದರ ಜೊತೆಗೆ, ಪರಿಸರ ಸಂರಕ್ಷಣೆ ಮಾಡುವುದು ಅತೀ ಮುಖ್ಯ. ಪರಿಸರ ರಕ್ಷಣೆಯ ನಿಟ್ಟಿನಲ್ಲಿ ಯಾರೂ ಸಪ್ಲಾಸ್ಟಿಕ್ ಬಳಸಬಾರದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಸಭಾ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಭವಿಷ್ಯದ ದೃಷ್ಟಿಯಿಂದ ಪ್ಲಾಸ್ಟಿಕ್ನ್ನು ಬಳಸಬಾರದು. ತ್ಯಾಜ್ಯವನ್ನು ಆದಷ್ಟು ಕಡಿಮೆ ಮಾಡುವತ್ತ ಗಮನಹರಿಸಬೇಕು. ಪ್ರತೀ ದಿನವು ಪರಿಸರ ಬಗ್ಗೆ ಜಾಗೃತಿ ಇರಬೇಕು. ಜಿಲ್ಲೆಯಲ್ಲಿ ಪರಿಸರ ಮತ್ತು ಅರಣ್ಯದ ಬಗ್ಗೆ ಹೆಚ್ಚಿನ ಕಾಳಜಿಯಿರುವುದು ಶ್ಲಾಘನೀಯ ಎಂದರು.
ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಮಾತನಾಡಿ ಪಶ್ಚಿಮಘಟ್ಟ ಪ್ರದೇಶದಲ್ಲಿ ಸಸ್ಯ ಮತ್ತು ಪ್ರಾಣಿ ಸಂಪತ್ತನ್ನು ಹೆಚ್ಚಾಗಿ ಕಾಣಬಹುದಾಗಿದೆ. ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿಯೇ ೪೦೦ ಕ್ಕೂ ಹೆಚ್ಚು ಹುಲಿಗಳು ಹಾಗೂ ೬ ಸಾವಿರಕ್ಕೂ ಹೆಚ್ಚು ಆನೆಗಳು ಇವೆ. ಆದರೂ ಕಳೆದ ೩೦-೪೦ ವರ್ಷಗಳಲ್ಲಿ ಕಾಡು ಸಹ ಕಡಿಮೆಯಾಗಿದೆ ಎಂಬುದನ್ನು ಮರೆಯುವಂತಿಲ್ಲ. ಆದ್ದರಿಂದ ಮಾನವ ಮತ್ತು ಕಾಡಾನೆ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಕಾಡಿನ ಸಂರಕ್ಷಣೆ ಅತ್ಯಗತ್ಯ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅವರು ಮಾತನಾಡಿ ಪ್ರತಿಯೊಬ್ಬರಲ್ಲಿಯೂ ಪರಿಸರ ಪ್ರಜ್ಞೆ ಮತ್ತು ಕಾಳಜಿ ಇರಬೇಕು. ಪರಿಸರ ಸಂರಕ್ಷಣೆ ಕುಟುಂಬದಿಂದಲೇ ಆರಂಭವಾಗಬೇಕು ,ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಇಂಗುಗುಂಡಿ ನಿರ್ಮಾಣ ಮಾಡಬೇಕು ಎಂದವರು ಹೇಳಿದರು.