ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ – ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಮಾನಸಿಕ ಬೆಳವಣಿಗೆ ಪೂರಕವಾದ ಶಿಕ್ಷಣ ನೀಡುವುದರೊಂದಿಗೆ ಮೌಲ್ಯಾಧಾರಿತ ಶಿಕ್ಷಣ ವನ್ನು ನೀಡುವ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಅಭಿಪ್ರಾಯಪಟ್ಟರು.
ಅವರು ಬುಧವಾರ ಉದ್ಯಾವರ ಸೈಂಟ್ ಫ್ರಾನ್ಸಿಸ್ ಝೇವಿಯರ್ ಆಂಗ್ಲ ಮಾಧ್ಯಮ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಶಿಕ್ಷಣ ಸೊಸೈಟಿ ವತಿಯಿಂದ ಆಯೋಜಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ನೀಡುವ ಶಿಕ್ಷಣ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಒಂದು ದೇಶ ಅಭಿವೃದ್ಧಿ ಹೊಂದಬೇಕಾಗದರೆ ಅದರಲ್ಲಿ ಶಿಕ್ಷಕರ ಪಾತ್ರ ಹಿರಿದಾದುದು. ಶಿಕ್ಷಕರು ಮಕ್ಕಳಲ್ಲಿನ ಅನನ್ಯ ಪ್ರತಿಭೆಯನ್ನು ಗುರುತಿಸಿ ಅದನ್ನು ಪೊಷೀಸುವ ಕೆಲಸ ಮಾಡಿದಾಗ ಅವರ ವೃತ್ತಿಗೆ ನಿಜವಾದ ಸಾರ್ಥಕತೆ ಲಭಿಸುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಭೋಜೆಗೌಡ ಮಾತನಾಡಿ ದೇಶದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವಾದದು. ಎಲ್ಳಾ ವಿಷಯಗಳಲ್ಲಿ ಸಮಾನತೆ ಕಾಯ್ದುಕೊಂಡು ಆರೋಗ್ಯ ಸಮಾಜಕ್ಕಾಗಿ ಪೂರ್ಣ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕನ ಮೇಲಿದೆ. ಶಿಕ್ಷಕರು ತಮ್ಮ ವೃತ್ತಿಯ ಗೌರವವನ್ನು ಕಾಪಾಡಿಕೊಳ್ಳಬೇಕು ಎಂದರು.
ಧರ್ಮಪ್ರಾಂತ್ಯ ಆಡಳಿತಕ್ಕೆ ಒಳಪಟ್ಟ ಶಾಲಾ, ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು, ಕಳೆದ ಶೈಕ್ಷಣಿಕ ವರ್ಷದಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳನ್ನು, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಳೆದ ಒಂದು ವರ್ಷದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಶಿಕ್ಷಣ ಸೊಸೈಟಿ ಆಡಳಿತಕ್ಕೊಳಪಟ್ಟ ಶಾಲೆಗಳಲ್ಲಿ ನಿಧನರಾದ ಶಿಕ್ಷಕರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸುಬ್ರಹ್ಮಣ್ಯ ಜೋಶಿ, ಉಡುಪಿ ವಲಯ ಶಿಕ್ಷಣ ಅಧಿಕಾರಿ ಮಂಜುಳಾ, ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಶಿಕ್ಷಣ ಸೊಸೈಟಿ ಇದರ ನಿಕಟಪೂರ್ವ ಕಾರ್ಯದರ್ಶಿ ಪ್ರಸ್ತುತ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ವಂ|ಡಾ|ಲೋರೆನ್ಸ್ ಡಿಸೋಜಾ, ಉದ್ಯಾವರ ಸೈಂಟ್ ಫ್ರಾನ್ಸಿಸ್ ಝೇವಿಯರ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|ಸ್ಟ್ಯಾನಿ ಬಿ ಲೋಬೊ ಉಪಸ್ಥಿತರಿದ್ದರು.
ಕೆಥೊಲಿಕ್ ಶಿಕ್ಷಣ ಸೊಸೈಟಿ ಉಡುಪಿ ಧರ್ಮಪ್ರಾಂತ್ಯ ಕಾರ್ಯದರ್ಶಿ ವಂ|ವಿನ್ಸೆಂಟ್ ಕ್ರಾಸ್ತಾ ಸ್ವಾಗತಿಸಿ ಮೂಡುಬೆಳ್ಳೆ ಸಂತ ಲಾರೆನ್ಸ್ ಕಾಲೇಜಿನ ಉಪನ್ಯಾಸಕರಾದ ನವೀನ್ ಕೊರೆಯಾ ವಂದಿಸಿದರು. ಸಿಸ್ಟರ್ ಪ್ರೆಸಿಲ್ಲಾ ಮತ್ತು ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.