ಭಾರತದಲ್ಲಿ ಕೊರೊನಾಗೆ ಕರ್ನಾಟಕದಲ್ಲಿ ಮೊದಲ ಬಲಿ

ಕಲಬುರಗಿ: ಕಲಬುರಗಿಯ 76 ವರ್ಷದ ವೃದ್ಧ ಸಾವನ್ನಪ್ಪಿದ್ದು ಕೊರೊನಾ ವೈರಸ್‍ನಿಂದಲೇ ಎಂದು ಖಚಿತವಾಗಿದೆ. ಈ ಮೂಲಕ ಭಾರತದಲ್ಲಿ ಕೊರೊನಾ ಮೊದಲಿ ಪಡೆದಂತಾಗಿದೆ.

ಕಲಬುರಗಿ ವೃದ್ಧನ ಲ್ಯಾಬ್ ರಿಪೋರ್ಟ್ ಈಗಷ್ಟೇ ನಮ್ಮ ಕೈಸೇರಿದೆ. ವರದಿಯಲ್ಲಿ ಕೊರೊನಾ ವೈರಸ್‍ನಿಂದಲೇ ಸಾವನ್ನಪ್ಪಿದ್ದಾರೆ ಎನ್ನುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಸ್ಪಷ್ಟಪಡಿಸಿದ್ದಾರೆ. ಕಲಬುರ್ಗಿಯಲ್ಲಿ ಮೊನ್ನೆ ಮೃತಪಟ್ಟ 76 ವರ್ಷದ ವೃದ್ಧರಿಗೆ ಕೊರೊನಾ ಸೋಂಕು ತಗಲಿದ್ದು ಖಚಿತವಾಗಿದೆ. ಇವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕವಾಗಿರಿಸಿ ನಿಗಾವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 29ರಂದು ಸೌದಿಯಿಂದ ಕಲಬುರಗಿ ನಗರಕ್ಕೆ ವೃದ್ಧ ಆಗಮಿಸಿದ್ದರು ಬಂದಿದ್ದರು. ಮಾರ್ಚ್ 5ರಂದು ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿಶೇಷ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು.

ಸಿದ್ದಿಕಿ ಅವರ ಗಂಟಲು ದ್ರವ ಸಂಗ್ರಹಿಸಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್‍ಗೆ ಕಳಿಸಲಾಗಿತ್ತು. ಆದರೆ ವರದಿಗೂ ಮುನ್ನವೇ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬಸ್ಥರು ಅವರನ್ನು ಹೈದರಾಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ವೃದ್ಧ ಸಾವನ್ನಪ್ಪಿರುವ ಬೆನ್ನಲ್ಲೇ ಅಧಿಕಾರಿಗಳು ಕುಟುಂಬಸ್ಥರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 74ಕ್ಕೆ ಹೆಚ್ಚಳವಾಗಿದೆ. ಈಗಾಗಲೇ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಬ್ರಿಟನ್ ನಲ್ಲಿ ಮೃತಪಟ್ಟಿದ್ದಾರೆ. ಇತ್ತ ಪುಣೆಯಲ್ಲಿ ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಕೇರಳದಲ್ಲಿ 12 ಜನಕ್ಕೆ ತಗುಲಿದ್ದ ಕೊರೊನಾ ಒಂದೇ ದಿನದಲ್ಲಿ 19ಕ್ಕೆ ಹೆಚ್ಚಾಗಿದೆ. ನಿನ್ನೆಯಷ್ಟೇ ಸಿಎಂ ಪಿಣರಾಯಿ ವಿಜಯನ್ ಅವರು ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, 7ನೇ ತರಗತಿವರೆಗೆ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದ್ದರು.


Leave a Reply

Your email address will not be published. Required fields are marked *

error: Content is protected !!