ನಿಗಮ, ಮಂಡಳಿಗೆ ನೇಮಕಾತಿ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್- ಪಟ್ಟಿಯಲ್ಲಿ ಹಿರಿಯ ಶಾಸಕರ ಹೆಸರು?
ಬೆಂಗಳೂರು: 2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಅಳೆದು ತೂಗಿದ ನಂತರ, ಕರ್ನಾಟಕದ ವಿವಿಧ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರಾಗಿ ನೇಮಕಗೊಳ್ಳುವ ನಾಯಕರ ಮೊದಲ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ಒಪ್ಪಿಗೆ ನೀಡಿದೆ.
ಕಾಂಗ್ರೆಸ್ ಹೈಕಮಾಂಡ್ ಅನುಮತಿ ಪಡೆದು ಹಿರಿಯ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿಯಿಂದ ಬೆಂಗಳೂರಿಗೆ ಮರಳಿದ್ದಾರೆ. ಮೂಲಗಳ ಪ್ರಕಾರ, ಹಿರಿಯ ಶಾಸಕರು ಮತ್ತು ಕೆಲವು ಎಂಎಲ್ಸಿಗಳು ಸೇರಿದಂತೆ ಸುಮಾರು 35 ನಾಯಕರ ಪಟ್ಟಿ ಯಾವುದೇ ಸಮಯದಲ್ಲಿ ಹೊರಬೀಳುವ ಸಾಧ್ಯತೆಯಿದೆ.
ಇದಕ್ಕೂ ಮುನ್ನ ಮಂಗಳವಾರ ಸಂಜೆ ನವದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮ್ಯಾರಥಾನ್ ಸಭೆ ನಡೆಸಿದರು. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇವರಿಬ್ಬರು ತಮ್ಮತಮ್ಮ ಪ್ರದೇಶದಲ್ಲಿ ಪಕ್ಷಕ್ಕೆ ಮತಗಳನ್ನು ಸೆಳೆಯಬಲ್ಲ ಕೆಲವು ನಾಯಕರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಜಾತಿ ಸಮೀಕರಣವೂ ಸಮಬಲಗೊಂಡಿದೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಚರ್ಚಿಸಿದ್ದಾರೆ.
ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ನಂಜೇಗೌಡ, ಬಂಗಾರಪೇಟೆಯ ಎಸ್.ಎನ್.ನಾರಾಯಣಸ್ವಾಮಿ, ಹುಬ್ಬಳ್ಳಿ-ಧಾರವಾಡ ಪೂರ್ವದ ಅಬ್ಬಯ್ಯ ಪ್ರಸಾದ್, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಶಾಸಕರ ಹೆಸರುಗಳು ಪಟ್ಟಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.
ಕೆಲವು ಆಕಾಂಕ್ಷಿಗಳು ರಾಷ್ಟ್ರ ರಾಜಧಾನಿಯಲ್ಲಿ ಮೊಕ್ಕಾಂ ಹೂಡಿದ್ದಾರೆ, ಹುದ್ದೆಗಳನ್ನು ಪಡೆಯಲು ಲಾಬಿ ನಡೆಸುತ್ತಿದ್ದಾರೆ, ಆದರೆ ಸಚಿವ ಸ್ಥಾನ ಬಯಸಿದ್ದ ಕೆಲ ನಾಯಕರು ಯಾವುದೇ ಹುದ್ದೆಯನ್ನು ಸ್ವೀರಕರಿಸಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.