ಉಡುಪಿ, ಮಂಗಳೂರು ಮತ್ತೆ ಎರಡು ದಿನ ರೆಡ್ ಅರ್ಲಟ್: ಭಾರೀ ಮಳೆಯ ಮುನ್ಸೂಚನೆ
ಉಡುಪಿ: ಜಿಲ್ಲೆ ಹಾಗೂ ದ.ಕ. ಮತ್ತೆ ಎರಡು ದಿನ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಎರಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ .
ಹವಾಮಾನ ಇಲಾಖೆ ಮಾಹಿತಿಯಂತೆ ಆ. 14 ರ ಮಧ್ಯಾಹ್ನ 1 ಗಂಟೆಯ ಬಳಿಕ ಆ. 15 ಬೆಳಿಗ್ಗೆ 8 : 30 ರವರೆಗೆ, ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡದಲ್ಲಿ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಶಾಲೆಗೆ ತೆರಳಿರುವ ಮಕ್ಕಳು ಮರಳಿ ಸುರಕ್ಷಿತವಾಗಿ ಮನೆ ಸೇರುವವರೆಗೆ ಶಾಲಾ ಆಡಳಿತ ಮಂಡಳಿ ಎಚ್ಚರವಹಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.
ಇದಲ್ಲದೆ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಹಾಗೂ ನದಿಗಳಲ್ಲಿ ಮೀನುಗಾರಿಕೆಗೆ ತೆರಳಬಾರದು. ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯಬಾರದು ಎಂದು ಡಿಸಿ ಸೂಚನೆ ನೀಡಿದ್ದಾರೆ. ಮುಂಜಾಗೃತ ಕ್ರಮವಾಗಿ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಮೊಬೈಲ್, ಕಚೇರಿಯ ದೂರವಾಣಿ ಚಾಲನೆಯಲ್ಲಿರಬೇಕು. ವಾಹನ ಸೇರಿದಂತೆ ತುರ್ತು ನೆರವಿಗೆ ಬೇಕಾದ ಅಗತ್ಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು ಎಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.