ಆ.13-15 ರ ವರೆಗೆ ಜಿಲ್ಲೆಯಲ್ಲಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಜು. 22: ರಾಷ್ಟ್ರದ 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸಾರ್ವಜನಿಕರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಭಕ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನವನ್ನು ಜಿಲ್ಲೆಯಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಆಯೋಜಿಸಲು ಅಗತ್ಯವಿರುವ ಸಿದ್ದತೆಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ನಿರ್ದೇಶನ ನೀಡಿದರು.
ಅವರು ಶುಕ್ರವಾರ, ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನ ಆಯೋಜಿಸುವ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಗಸ್ಟ್ 13 ರಿಂದ 15 ರ ವರೆಗೆ ಜಿಲ್ಲೆಯ ಎಲ್ಲಾ ಮನೆಗಳು, ಸರಕಾರಿ ಕಟ್ಟಡಗಳು, ಬಹುಮಹಡಿ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು ,ಸಂಘ ಸಂಸ್ಥೆಗಳು, ವಸತಿ ಸಮುಚ್ಛಯಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಕುರಿತಂತೆ ಜಾಗೃತಿ ಮೂಡಿಸಲು ನಗರ ಪ್ರದೇಶದಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ನೌಕರರು, ಆಶಾ, ಅಂಗನವಾಡಿ ಕಾರ್ಯಕರ್ತರು, ಸ್ವಸಹಾಯ ಸಂಘಧ ಪ್ರತಿನಿಧಿಗಳ ಮೂಲಕ ಪ್ರಚಾರ ಅಭಿಯಾನ ನಡೆಸುವಂತೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸುವಂತೆ ಹಾಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತಂತೆ ಅವರ ಪೋಷಕರಿಗೆ ವಿದ್ಯಾರ್ಥಿಗಳ ಮೂಲಕ ಪತ್ರ ಬರೆಸುವ ಕಾರ್ಯಕ್ರಮ ಆಯೋಜಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಸರಕಾರಿ ವಾಹನಗಳು ಮತ್ತು ಸಾರ್ವಜನಿಕ ಸಾರಿಗೆ ವಾಹನಗಳ ಮೇಲೆ ಅಭಿಯಾನದ ಕುರಿತು ಸ್ಟಿಕರ್ ಅಳವಡಿಸುವಂತೆ
ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಕರಪತ್ರಗಳ ಮೂಲಕ ಪ್ರಚಾರ ಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಧ್ವಜಗಳ ಕೊರತೆಯಾಗದಂತೆ ವರ್ತಕರಿಗೆ ತಮ್ಮ ಅಂಗಡಿಗಳಲ್ಲಿ ಹೆಚ್ಚಿನ ಸಂಖ್ಯೆಯ ಧ್ವಜಗಳ ದಾಸ್ತಾನು ಹೊಂದಿರುವ ಕುರಿತು ಮಾಹಿತಿ ನೀಡಬೇಕು, ಜಿಲ್ಲೆಯ ಎಲ್ಲಾ ಪಡಿತರ ಅಂಗಡಿಗಳಲ್ಲಿ ಸಹ ಧ್ವಜಗಳ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು, ಯುವಕ ಸಂಘಗಳು, ಸ್ವ ಸಹಾಯ ಸಂಘಗಳು, ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳಿಗೆ ಅಭಿಯಾನದ ಬಗ್ಗೆ ಮಾಹಿತಿ ನೀಡಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು. ಜಿಲ್ಲೆಯ ಪ್ರಮುಖ ಸಾಹಿತಿಗಳು, ಕಲಾವಿದರು, ಕ್ರೀಡಾಪಟುಗಳು ಹಾಗೂ ಧಾರ್ಮಿಕ ಮುಖಂಡರ ಮೂಲಕ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಬಗ್ಗೆ ಹೇಳಿಕೆ ಪಡೆದು ಪ್ರಚಾರ ಮಾಡಬೇಕು ಎಂದರು.
ಉಡುಪಿ ಜಿಲ್ಲೆಯಲ್ಲಿ 2.80 ಲಕ್ಷ ಮನೆಗಳು ಮತ್ತು ಅಂದಾಜು 1.20 ಲಕ್ಷ ಇತರೆ ಕಟ್ಟಡಗಳಿದ್ದು ಒಟ್ಟು 4 ಲಕ್ಷಕ್ಕೂ ಧ್ವಜಗಳ ಹಾರಾಟದ ಉದ್ದೇಶವಿದ್ದ, ಧ್ವಜ ಸಂಹಿತೆ ಮತ್ತು ಗೌರವವನ್ನು ಕಾಪಾಡಿಕೊಂಡು ಧ್ವಜಗಳನ್ನು ಹಾರಿಸುವ ಕುರಿತಂತೆ ನೀಡಿರುವ ಅಗತ್ಯ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಗುವುದು ಎಂದರು.
ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ ಕಾರ್ಯಕ್ರಮವನ್ನು ತಾಲೂಕು ಮಟ್ಟಗಳಲ್ಲಿಯೂ ಅತ್ಯಂತ ಶಸ್ವಿಯಾಗಿ
ಅನುಷ್ಠಾನ ಮಾಡುವ ಕುರಿತಂತೆ ಎಲ್ಲಾ ತಹಸೀಲ್ದಾರರುಗಳು ತಮ್ಮ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸುವಂತೆ ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ದೇಶದ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದ ಸಂದರ್ಭದಲ್ಲಿ ಈ ಕಾರ್ಯಕ್ರಮದ ಮೂಲಕ ಜಿಲ್ಲೆಯಾದ್ಯಂತ ಜನತೆಯಲ್ಲಿ ದೇಶಪ್ರೇಮ ಮತ್ತು ರಾಷ್ಟಿಯತೆಯನ್ನು ಮೂಡಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.