ಪ್ರವೀಣ್ ನೆಟ್ಟಾರು ಹತ್ಯಾ ಆರೋಪಿಗಳ ಶೀಘ್ರ ಬಂಧನ- ಸುನಿಲ್ ಕುಮಾರ್

ಸುಳ್ಯ: ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ರಾಜ್ಯ ಗೃಹಸಚಿವರ ಜತೆ ಚರ್ಚೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ  ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಬಿಜೆಪಿ ಯುವ ಮುಖಂಡ, ಅಮಾಯಕ ಪ್ರವೀಣ್ ಬೆಳ್ಳಾರೆ ಮೇಲೆ ದಾಳಿ, ಕೊಲೆ ಕೃತ್ಯ ಖಂಡನೀಯ. ಇದನ್ನು ನೋಡಿ ಸುಮ್ಮನಿರಲು ಸಾಧ್ಯವಿಲ್ಲ. ಘಟನೆ ಬಗ್ಗೆ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಕಲೆ ಹಾಕಿ, ಗೃಹ ಸಚಿವರಿಗೆ ವರದಿ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಶೀಘ್ರ ತಂಡ ರಚಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ಮಟ್ಟಹಾಕುವ ಕೆಲಸವನ್ನು ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಪ್ರವೀಣ್ ಹತ್ಯೆ ವಿಚಾರದಲ್ಲಿ ಯಾರೂ ಉದ್ವೇಗಕ್ಕೊಳಗಾಗುವುದು ಬೇಡ. ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಶಾಂತಿ ಪ್ರಿಯರು. ಕೊಲೆ ವಿಚಾರದಲ್ಲಿ ಆರೋಪಿಗಳ ಮಟ್ಟಹಾಕುವ ಪ್ರಯತ್ನ ಶೀಘ್ರದಲ್ಲೇ ಆಗಲಿದೆ ಎಂದರು.

ಧರಣಿ: ಕೊಲೆಯಾದ ಪ್ರವೀಣ್ ನೆಟ್ಟಾರು ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ. ಅವರ ಮೃತದೇಹ ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿದೆ. ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಕೊಂಡೊಯ್ಯಲು ಸಿದ್ಧತೆ ನಡೆಯುತ್ತಿರುವಂತೆಯೇ  ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಬೇಕು ಎಂದು ಒತ್ತಾಯಿಸಿದ್ದಾರೆ. ಆಸ್ಪತ್ರೆ ಮುಂಭಾಗ ಧರಣಿ ಕುಳಿತಿದ್ದಾರೆ.

ಪುತ್ತೂರು ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ಅವರು ರಾತ್ರಿಯೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಸುಳಿವು ಪತ್ತೆ: ಬೈಕ್‌ನಲ್ಲಿ ಬಂದ ತಂಡವು ಕೊಲೆ ನಡೆಸಿದೆ. ಬೈಕ್ ನ ನಂಬರ್ ಪೊಲೀಸರಿಗೆ ಲಭ್ಯವಾಗಿದೆ. ಬೆಳ್ಳಾರೆ ಪೇಟೆ ಸಹಿತ ಈ ಭಾಗದಲ್ಲಿ ಪೋಲೀಸರು ಬಿಗಿ ಬಂದೋಬಸ್ತ್ ಗೆ ಕ್ರಮ ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಹೇಳಿದರು. 

ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲು ಎಂದು ಹಿಂದೂ ಸಂಘಟನೆಯ ಕರೆ

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಇಂದು ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸಿ ಪ್ರತಿಭಟಿಸಿಲು ನಿರ್ಧಾರಿಸಿದ್ದಾರೆ. ಈ ಕೃತ್ಯಕ್ಕೆ ಪ್ರೇರಣೆ ನೀಡಿದಂತವರನ್ನು ಬಂಧಿಸಬೇಕು. ಅಷ್ಟೇ ಅಲ್ಲದೇ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!