ನೆಟ್ಟಾರು ಪ್ರವೀಣ್ ಕುಟುಂಬಕ್ಕೆ ರೂ.25 ಲಕ್ಷದ ಚೆಕ್ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ
ದ.ಕ ಜು. 28( ಉಡುಪಿ ಟೈಮ್ಸ್ ವರದಿ): ಮಂಗಳವಾರ ರಾತ್ರಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದರು.
ಈ ವೇಳೆ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿಯವರು 25 ಲಕ್ಷದ ಚೆಕ್ ನ್ನು ಮನೆಯವರಿಗೆ ಹಸ್ತಾಂತರ ಮಾಡಿದರು.
ಈ ವೇಳೆ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನಾ ಅವರು ಇನ್ನು ಮುಂದೆ ಇಂತಹ ಘಟನೆಗಳು ನಡೆಯಬಾರದು. ಹಾಗೂ ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಮುಖ್ಯಮಂತ್ರಿ ಯವರ ಬಳಿ ತಮ್ಮ ಅಳಲು ತೋಡಿಕೊಂಡರು.
ಬಳಿಕ ಮಾತನಾಡಿದ ಅವರು ಪ್ರವೀಣ್ ನೆಟ್ಟಾರು ಅವರದ್ದು ಕೊಲೆ ಮಾತ್ರವಲ್ಲ ಇದು ದೇಶ ದ್ರೋಹದ ಕೆಲಸವಾಗಿದೆ. ಇದನ್ನು ಕೇವಲ ಒಂದು ಕೊಲೆಯ ಪ್ರಕರಣವಾಗಿ ಪರಿಗಣಿಸುವುದಿಲ್ಲ. ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು ಶೀಘ್ರವಾಗಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಂಸದರಾದ ನಳೀನ್ ಕುಮಾರ್ ಕಟೀಲ್, ನಾಯಕರಾದ ಸಿ.ಟಿ ರವಿ, ಶಾಸಕರಾದ ಸಂಜೀವ್ ಮಠಂದೂರು, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
.