ಮಂಗಳೂರು: ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,ಜು.29 : ದ.ಕ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಇಂದಿನಿಂದ ಆಗಸ್ಟ್ 1 ರ ವರೆಗೆ ಜಿಲ್ಲೆಯಲ್ಲಿ ಎಲ್ಲಾ ಅಂಗಡಿಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಫಾಝಿಲ್ ಎಂಬ ಯುವಕನ ಹತ್ಯೆ ನಡೆದಿರುವ ಕಾರಣ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಇಂದಿನಿಂದ (ಜು.29) ಆಗಸ್ಟ್ 1 ರ ವರೆಗೆ ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಸೇವೆಗಳು, ಆಸ್ಪತ್ರೆ ಹಾಗೂ ಮೆಡಿಕಲ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿ ಮುಂಗಟ್ಟುಗಳಿಗೆ ಈ ಆದೇಶ ಅನ್ವಯಿಸಲಿದ್ದು, ಸ್ಥಳೀಯಾಡಳಿತ ಸಂಸ್ಥೆಗಳು ಅಂಗಡಿಗಳ ಮೇಲೆ ನಿಗಾ ಇರಿಸಬೇಕು. ಹಾಗೂ ಜನತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕುಗಳಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ/ ದಾಸ್ತಾನು/ ಸಾಗಾಣಿಕೆಯನ್ನು ನಿಬರ್ಂಧಿಸಲಾಗಿದೆ. ಹಾಗೂ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಇಂದಿನಿಂದ ಆಗಸ್ಟ್ 1 ರ ಬೆಳಿಗ್ಗೆ 8 ಗಂಟೆ ವರೆಗೆ ಮುಚ್ಚಲು ಆದೇಶಿಸಲಾಗಿದೆ.

ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಲಾಗಿದ್ದು, ನಿಷೇದಾಜ್ಞೆ ಇರುವ ಸಮಯದಲ್ಲಿ ಬಾರ್/ ವೈನ್ ಶಾಪ್ ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಗಳನ್ನು ಕಡ್ಡಾಯವಾಗಿ ಹಾಕುವಂತೆ ವ್ಯವಸ್ಥೆಗೊಳಿಸಲು ತಿಳಿಸಲಾಗಿದೆ. 

Leave a Reply

Your email address will not be published. Required fields are marked *

error: Content is protected !!