ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ- ಸುಪ್ರೀಂಕೋರ್ಟ್ ಆದೇಶ
ನವದೆಹಲಿ, ಆ 30: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ.
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಹಾಗೂ ಎಂ.ಎಂ ಸುಂದರೇಶ್ ಅವರ ತ್ರಿಸದಸ್ಯ ಪೀಠವು ಈ ಆದೇಶ ನೀಡಿದೆ.
ಈದ್ಗಾ ಮೈದಾನದ ವಿಚಾರದಲ್ಲಿ ಮುಂದಿನ ಎರಡು ದಿನ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು. ಇಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಇಲ್ಲ ಎಂದು ತಿಳಿಸಿದ ಕೋರ್ಟ್ ಬೇರೆ ಸ್ಥಳದಲ್ಲಿ ಗಣೇಶೋತ್ಸವ ಆಚರಿಸುವಂತೆ ಸೂಚಿಸಿದೆ.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಆದೇಶ ನೀಡಿರುವುದನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಕ್ಫ್ ಬೋರ್ಡ್ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಿ ಈದ್ಗಾ ಮೈದಾನವು ವಕ್ಫ್ ಬೋರ್ಡ್ ಆಸ್ತಿ ಎಂದು ವಾದಿಸಿದರು.ಸರ್ಕಾರದ ಪರವಾಗಿ ವಾದ ಮಂಡಿಸಿದ ಮುಕುಲ್ ರೋಹ್ಟಗಿ ಅವರು, 1987ರಿಂದಲೂ ಈ ಮೈದಾನವನ್ನು ಸರ್ಕಾರದ ಆಸ್ತಿ ಎಂದು ಪಹಣಿಯಲ್ಲಿ ಉಲ್ಲೇಖಿಸಲಾಗಿದ್ದು, ಕಂದಾಯ, ಬಿಬಿಎಂಪಿ ದಾಖಲೆಗಳಲ್ಲಿ ಆಟದ ಮೈದಾನ ಎಂದು ಉಲ್ಲೇಖಗೊಂಡಿದೆ.
ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರವೇ ಅನುಮತಿ ನೀಡಿದೆಯೇ ಹೊರತು ಬಿಬಿಎಂಪಿ ಅಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು. ಅಲ್ಲದೆ ಅಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು. ಮೈದಾನಕ್ಕೆ ಮಾಲಕರಾರೂ ಇಲ್ಲದಿದ್ದರೆ ರಾಜ್ಯ ಸರ್ಕಾರವೇ ಮಾಲಕ. ಸದ್ಯ ಅಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ನ್ಯಾಯಪೀಠ ಸೂಚಿಸಿತು.