ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ‌ ಸ್ವಾಗತ

ಮಂಗಳೂರು, ಸೆ.2: ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿರುವ 3,800 ಕೋ. ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲು ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿದಿದ್ದಾರೆ.

ಕೇರಳದಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು. ಮೋದಿ ಅವರು ವಿಮಾನ ನಿಲ್ದಾಣದಿಂದ ಸೇನಾ ಹೆಲಿಕಾಪ್ಟರ್ ನಲ್ಲಿ ಕೂಳೂರು ಹೆಲಿಪ್ಯಾಡ್ ನತ್ತ ತೆರಳಿದ್ದಾರೆ.

ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಗವಹಿಸುವಿಕೆಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಾವಿರಾರು ಸಂಖ್ಯೆಯಲ್ಲಿ ಜನಸಾಗರ ಹರಿದು ಬರುತ್ತಿದೆ.

ಬೆಳಗ್ಗೆ 11 ಗಂಟೆಯಿಂದಲೇ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಂಡೋಪತಂಡವಾಗಿ ಗೋಲ್ಡ್ ಪಿಂಚ್ ಸಿಟಿಯತ್ತ ಹೆಜ್ಜೆ ಹಾಕುತ್ತಿದ್ದು, ಪ್ರಧಾನಿ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷ ಜನರು ಪಾಲ್ಗೊಳ್ಳುವ ಸಾಧ್ಯತೆಗಳಿವೆ.

ಮಂಗಳೂರಿನ ಪ್ರತಿ ವಾರ್ಡ್ ನಿಂದ ಜನರನ್ನು ಕಾರ್ಯಕ್ರಮಕ್ಕೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿದೆ. ಹಾಗೂ  ಸಭೆಯಲ್ಲಿ ಪಾಲ್ಗೊಳ್ಳುವವರಿಗೆ ನೀರು ಮತ್ತು ಆಹಾರದ ವ್ಯವಸ್ಥೆ ಮಾಡಲಾಗಿದೆ.

 ಪ್ರಧಾನಿ ಮೋದಿ ಅವರು ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 3,800  ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಸಿದ್ದಾರೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ ವಿಐ ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (677 ಕೋಟಿ ರೂ.) ಗಳು ಸೇರಿವೆ.

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್.ಎಂ.ಪಿ.ಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (100 ಕೋಟಿ ರೂ), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ.100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಇದರ ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನಡೆಸಿ‌ ಚಾಲನೆ ನೀಡಿದರು. 

Leave a Reply

Your email address will not be published. Required fields are marked *

error: Content is protected !!