ಸೆ.8 ರ ಬಿಜೆಪಿ ಜನೋತ್ಸವ ಮುಂದೂಡಿಕೆ
ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಸೆ. 11ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ.ಕತ್ತಿ (62) ನಿಧನ ಹಿನ್ನೆಲೆಯಲ್ಲಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲು ಸರ್ಕಾರ ತೀರ್ಮಾನಿಸಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಜನಪರ ಯೋಜನೆಗಳ ಬಗ್ಗೆ ಜನತೆಗೆ ತಿಳಿಸುವ ಉದ್ದೇಶದಿಂದ ರಾಜ್ಯದಲ್ಲಿ 7 ಕಡೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ದೊಡ್ಡಬಳ್ಳಾಪುರ ದಲ್ಲಿ ನಾಳೆ ಮೊದಲ ಜನೋತ್ಸವ ಕಾರ್ಯಕ್ರಮ ನಡೆಯಬೇಕಿತ್ತು.
ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.