ಅಕ್ಟೋಬರ್‌ಗೆ ಪದವಿ ತರಗತಿ ಆರಂಭ: ಡಿಸಿಎಂ ಡಾ.ಅಶ್ವತ್ಥನಾರಾಯಣ
ಬೆಂಗಳೂರು: ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವು ಸೆ. 1ರಿಂದ ಆನ್‌ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದ್ದು, ಅಕ್ಟೋಬರ್‌ನಿಂದ ನೇರ ತರಗತಿಗಳು ಆರಂಭವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ನೇರವಾಗಿ ತರಗತಿಗಳನ್ನು ಆರಂಭಿಸುವ ಬಗ್ಗೆ ಕೇಂದ್ರ ಸರ್ಕಾರದಿಂದ ಮಾರ್ಗ ಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲವು ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ, ಮುಂದಿನ ತಿಂಗಳಿನಿಂದ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಆನ್‌ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಲಾಗಿದೆ’ ಎಂದರು.
‘ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ. ಯುಜಿಸಿ ಮಾರ್ಗ ಸೂಚಿಯಂತೆ ತರಗತಿಗಳನ್ನು ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಪೂರ್ವಸಿದ್ಧತೆ ಮಾಡಿಕೊಂಡಿದೆ. ಕೇಂದ್ರದ ಆದೇಶ ಬರುತ್ತಿದ್ದಂತೆಯೇ ಈ ದಿಕ್ಕಿನಲ್ಲಿ ಕಾರ್ಯೋನ್ಮುಖರಾಗಲಿದ್ದೇವೆ’ ಎಂದರು.
‘ಯಾವುದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂಬ ಕಾರಣಕ್ಕೆ ಶೈಕ್ಷಣಿಕ ವರ್ಷದ ಆರಂಭದ ಜತೆಯಲ್ಲಿಯೇ ಅಂತಿಮ ವರ್ಷದಲ್ಲಿರುವ ಎಲ್ಲ ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜತೆಗೆ,
ಬ್ಯಾಕ್ ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗುವುದು’ ಎಂದು ಹೇಳಿದರು.
ನೀಟ್ ಪರೀಕ್ಷೆಗೆ ಅಡ್ಡಿ ಬೇಡ: ‘ಕೆಲವರು ನೀಟ್ ಪರೀಕ್ಷೆ ಯಾಕೆ ಬೇಡ ಅನ್ನುತ್ತಿದ್ದಾರೋ ಗೊತ್ತಿಲ್ಲ. ಮೆರಿಟ್ ಮೂಲಕ ಸೀಟು ಸಿಗಬಾರದು, ವ್ಯವಸ್ಥಿತವಾಗಿ ಸೀಟು ಹಂಚಿಕೆ ಯಾಗಬಾರದು ಎಂಬ ದುರುದ್ದೇಶ ಇದರ ಹಿಂದೆ ಇದ್ದಂತೆ ಕಾಣುತ್ತಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮೊದಲಿನಿಂದಲೂ ನೀಟ್ ಪರೀಕ್ಷೆಗೆ ಅಡ್ಡಿಪಡಿಸುತ್ತಿವೆ. ಈ ಪರೀಕ್ಷೆ ನಡೆಯಲೇಬೇಕಿದೆ. ಪರೀಕ್ಷೆ ನಡೆಸಲು ಸರ್ಕಾರ ಸಿದ್ಧವಾಗಿದೆ’ ಎಂದು ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.