ಅ.2 ರಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ- 31,679 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ
ಉಡುಪಿ ಸೆ.29 (ಉಡುಪಿ ಟೈಮ್ಸ್ ವರದಿ): ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ, ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲೆ 25 ವರ್ಷ ಪೂರೈಸಿದ ಸಂಭ್ರಮಾಚರಣೆ ಪ್ರಯುಕ್ತ ಉಡುಪಿ ಜಿಲ್ಲೆಯ ಒಟ್ಟು 350 ಸರ್ಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆ, ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 31,679 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಅ.2 ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ಸೊಸೈಟಿಯ ಉಪಾಧ್ಯಕ್ಷ ಹೆಚ್ ನಾಗರಾಜ್ ಶೆಟ್ಟಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನದಂದು ನಡೆಯುವ ಕಾರ್ಯಕ್ರಮವನ್ನು ರಾಜ್ಯ ಇಂಧನ ಸಚಿವ ಸುನೀಲ್ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ನಟ ನಿರೂಪಕ ರಮೇಶ್ ಅರವಿಂದ್, ಪಾಂಡಿಚೇರಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಹಾಲಾಡಿ ಪ್ರತಾಪ್ ಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಎನ್.ಕೆ.ಶಿವರಾಜ್ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು. ಹಾಗೂ ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ಸೊಸೈಟಿಯ ಅಧ್ಯಕ್ಷರಾದ ಹೆಚ್.ಎಸ್.ಶೆಟ್ಟಿ ಅವರ ಅಪೇಕ್ಷೆಯಂತೆ ಅಂದಾಜು 1.75 ಕೋಟಿ ರೂ ವೆಚ್ಚದಲ್ಲಿ ಉಚಿತ ಸಮವಸ್ತ್ರ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪಾಲೋಳ್ಳುವ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರಯಾಣ ವೆಚ್ಚವನ್ನು ಸೊಸೈಟಿಯಿಂದಲೇ ಭರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸೊಸೈಟಿಯ ಕಾರ್ಯದರ್ಶಿ ಹೆಗ್ಗುಂಜೆ ರಾಜೀವ್ ಶೆಟ್ಟಿ , ಅಮಾಸೆಬೈಲ್ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ, ನಿಧಿ ಎಸ್. ಹೆಗ್ಡೆ ಉಪಸ್ಥಿತರಿದ್ದರು.