ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ಶೇ.96 ಮತದಾನ, ನಾಳೆ ಫಲಿತಾಂಶ
ಹೊಸದಿಲ್ಲಿ, ಅ.18: ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ನಿನ್ನೆ ಬೆಳಿಗ್ಗೆ ಚುನಾವಣೆ ನಡೆದಿದ್ದು, ಅ.19 ರಂದು ಫಲಿತಾಂಶ ಹೊರ ಬೀಳಲಿದೆ.
ದಿಲ್ಲಿಯ ಎಐಸಿಸಿ ಪ್ರಧಾನ ಕಚೇರಿಯೂ ಸೇರಿದಂತೆ ದೇಶಾದ್ಯಂತ ಒಟ್ಟು 65 ಕೇಂದ್ರಗಳಲ್ಲಿ ನಿನ್ನೆ ಬೆಳಿಗ್ಗೆ 10 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 4 ಗಂಟೆ ವರೆಗೆ ನಡೆಯಿತು. ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.
ಮತದಾನದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಅವರು, ಒಟ್ಟು 9,900 ಪ್ರತಿನಿಧಿಗಳ ಪೈಕಿ 9,500 ಪ್ರತಿನಿಧಿಗಳು ಮತ ಚಲಾಯಿಸಿದ್ದು, ಶೇ.96ರಷ್ಟು ಮತದಾನವಾಗಿದೆ. ಎಲ್ಲಾ ರಾಜ್ಯಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಯಾವುದೇ ಪ್ರತಿಕೂಲ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ. ಇದು ಅತಿ ದೊಡ್ಡ ಸಾಧನೆ. ಮತದಾನವನ್ನು ಶಾಂತಿಯುತ ರೀತಿಯಲ್ಲಿ ಮುಕ್ತವಾಗಿ ನಡೆಸಲಾಯಿತು ಎಂದು ತಿಳಿಸಿದ್ದಾರೆ.
‘‘ಆಂತರಿಕ ಪ್ರಜಾಪ್ರಭುತ್ವ ಎಂದರೇನು ಎಂಬುದನ್ನು ಕಾಂಗ್ರೆಸ್ ಪಕ್ಷ ತೋರಿಸಿಕೊಟ್ಟಿದೆ. ಇದರಿಂದ ಪಾಠ ಕಲಿಯಲು ಬಯಸುವ ಇತರ ಪಕ್ಷಗಳು ಇದೇ ರೀತಿ ಮಾಡಬಹುದು’’ ಎಂದು ಅವರು ಹೇಳಿದರು.
ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಿಲ್ಲಿಯ ಎಐಸಿಸಿ ಕಚೇರಿಯಲ್ಲಿ ಮತ ಚಲಾಯಿಸಿದರು. ಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ಹಾಗೂ ಪ್ರತಿನಿಧಿಗಳು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮತ ಚಲಾಯಿಸಿದರು. ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ಮತದಾನ ಮಾಡಿದರು ಎಂದು ತಿಳಿದು ಬಂದಿದೆ.