ಸರ್ಕಾರಿ ಶಾಲೆ ಮಕ್ಕಳಿಂದ ತಿಂಗಳಿಗೆ 100 ರೂ. ಸಂಗ್ರಹ- ಆದೇಶ ಹಿಂಪಡೆಯುವಂತೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಶಿಕ್ಷಣ ಇಲಾಖೆ ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ದೇಣಿಗೆ ರೂಪದಲ್ಲಿ ಎಸ್‌ಡಿಎಂಸಿಗಳ ಮೂಲಕ ಮಾಸಿಕ ತಲಾ 100 ರೂ. ಸಂಗ್ರಹಕ್ಕೆ ಅವಕಾಶ ನೀಡಿ ಸುತ್ತೋಲೆ ಹೊರಡಿಸಿದ್ದು, ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆ ಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು. ವಿದ್ಯಾರ್ಥಿಗಳಿಗೆ ಹಾಲು,‌ ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಈಗ ಅವರಿಂದ ದುಡ್ಡು‌ ಕಿತ್ತುಕೊಳ್ಳಲು ಹೊರಟಿದೆ ಎಂದು ಸಿದ್ದರಾಮಯ್ಯ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ‌ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಪ್ರತಿ ವರ್ಷ ಸರ್ಕಾರ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ, ಕೆಲವೊಮ್ಮೆ ಶಾಲೆಗಳ ಸ್ಥಳೀಯ ಅಗತ್ಯತೆಯಂತೆ ಹೆಚ್ಚುವರಿ ಹಣಕಾಸಿನ ನೆರವು ಅಗತ್ಯವಾಗುತ್ತದೆ. ಹಾಗಾಗಿ ಪ್ರತಿ ವಿದ್ಯಾರ್ಥಿಗಳ ಪೋಷಕರಿಂದ ದೇಣಿಗೆ ರೂಪದಲ್ಲಿ ಮಾಸಿಕ 100 ರೂ. ಹಣವನ್ನು ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಖಾತೆಗೆ ಸಂದಾಯ ಮಾಡಿಕೊಂಡು ಶಾಲಾಭಿವೃದ್ಧಿ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಬಳಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!