ಸುರತ್ಕಲ್: ವ್ಯಾಪಾರಿ ಜಲೀಲ್ ಹತ್ಯೆ- ಮೂರು ದಿನ ‌ನಿಷೇಧಾಜ್ಞೆ ಜಾರಿ

ಮಂಗಳೂರು: ಸುರತ್ಕಲ್ ನ ಕೃಷ್ಣಾಪುರದ ವ್ಯಾಪಾರಿ ಜಲೀಲ್ ರನ್ನ ಶನಿವಾರ ರಾತ್ರಿ ಮುಸುಕುಧಾರಿಗಳು ಹತ್ಯೆಗೈದ ಹಿನ್ನೆಲೆಯಲ್ಲಿ ಕಾನೂನು ವ್ಯವಸ್ಥೆಗೆ ಧಕ್ಕೆ ತರುವಂತಹ ಅಹಿತಕರ ಘಟನೆ ನಡೆಯುವುದನ್ನು ತಡೆಯುವ ಸಲುವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬಜಪೆ, ಸುರತ್ಕಲ್, ಕಾವೂರು, ಪಣಂಬೂರು ಠಾಣೆಗಳ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 144ರ ಅಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಆದೇಶ ಮಾಡಿದ್ದಾರೆ.

ಇಂದು ಬೆಳಿಗ್ಗೆ 6ರಿಂದ ಇದೇ 27ರಂದು ಬೆಳಿಗ್ಗೆ 6ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ಇರುವ ಕೈಗಾರಿಕೆಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಕಚೇರಿಗಳ ಕೆಲಸದ ಪಾಳಿಯನ್ನು ಸಂಜೆ 6ಕ್ಕೆ ಬದಲಾಯಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ರಾತ್ರಿ 6ರ ನಂತರದ ಪಾಳಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಅನಗತ್ಯವಾಗಿ ರಸ್ತೆಗಳಲ್ಲಿ ಅಡ್ಡಾಡದಂತೆ ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

ಈ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ಇದೇ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಇದೇ 27ರಂದು ಬೆಳಿಗ್ಗೆ 10ರವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರನ್ನು ನಗರ ಪೊಲೀಸ್ ಕಮಿಷನರ್ ಕೋರಿದ್ದಾರೆ.

ಜಲೀಲ್ ಅವರು ಕೃಷ್ಣಾಪುರದಲ್ಲಿ ಹೊಂದಿದ್ದ ಅಂಗಡಿಗೆ ನುಗ್ಗಿದ್ದ ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಶನಿವಾರ ರಾತ್ರಿ ಅವರಿಗೆ ಚೂರಿಯಿಂದ ಇರಿದಿದ್ದರು. ತಕ್ಷಣವೇ ಅಕ್ಕ ಪಕ್ಕದ ಅಂಗಡಿಯವರು ಹಾಗೂ ಸ್ಥಳೀಯರು ಸೇರಿ ಗಾಯಾಳು ಜಲೀಲ್ ಅವರನ್ನು ಮುಕ್ಕದ ಶ್ರೀನಿವಾಸ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು. ಅದಾಗಲೇ ಅವರು ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದರು.

Leave a Reply

Your email address will not be published. Required fields are marked *

error: Content is protected !!