ಕೋವಿಡ್ ಸೇವೆಗೆ ಗ್ರಾ.ಪಂ.ಡಾಟಾ ಎಂಟ್ರಿ ಅಪರೇಟರ್ ಬಳಕೆಗೆ ಸರ್ಕಾರ ಸೂಚನೆ
ಬೆಂಗಳೂರು: ಕೋವಿಡ್ -19 ನಿಯಂತ್ರಣ ಸಂಬಂಧ ಅಗತ್ಯ ಕ್ರಮಗೊಳ್ಳಲು ಮತ್ತು ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಗ್ರಾಮ ಪಂಚಾಯಿತಿ ಯಲ್ಲಿನ ಡಾಟಾ ಎಂಟ್ರಿ ಆಪರೇಟರುಗಳ ಸೇವೆ ಪಡೆಯಲು ಸರ್ಕಾರ ಸೂಚಿಸಿದೆ.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಿಲ್ಲ. ಹೀಗಾಗಿ ಕೋವಿಡ್ -19 ಸೊಂಕು ನಿಯಂತ್ರಣ ಹಾಗೂ ಆರೋಗ್ಯ ಇಲಾಖೆಯ ಇತರೆ ಕಾರ್ಯಕ್ರಮಗಳ ಬಗ್ಗೆ ದಾಖಲಾತಿ ಕೆಲಸಗಳನ್ನು ನಿರ್ವಹಿಸಲು ಸಿಬ್ಬಂದಿ ಕೊರತೆ ಇದ್ದು , ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಒದಗಿಸಿಕೊಡುವ ಅಗತ್ಯವಿರುತ್ತದೆ.
ಹೀಗಾಗಿ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು, ಆಯಾಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ದಿನ ಒಂದು ಗಂಟೆ ಕೆಲಸ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟರ್‌ಗಳ ಕೆಲಸದ ವೇಳೆ ಒಂದು ಗಂಟೆ ಕಡಿತಗೊಳಿಸಿ ಕೋವಿಡ್ ಸೇವೆಗೆ ಬಳಸಿಕೊಳ್ಳಬೇಕು. ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಳಗಳಲ್ಲಿ , ಗ್ರಾಮ ಪಂಚಾಯಿತಿ ಇಲ್ಲದಿದ್ದಲ್ಲಿ , ಪಕ್ಕದ ಗ್ರಾಮ ಪಂಚಾಯಿತಿಯಿಂದ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಕಳುಹಿಸಲು ವ್ಯವಸ್ಥೆ ಮಾಡಬೇಕು.
ಈ ರೀತಿ ಹೆಚ್ಚುವರಿಯಾಗಿ ನಿಯೋಜಿಸಿದ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು, ತರಬೇತಿ ನೀಡುಬೇಕು ಹಾಗೂ ಸಂಬಂಧಪಟ್ಟ ಉಪವಿಭಾಗಾಧಿಕಾರಿಗಳು ಇದರ ಮೇಲ್ವಿಚಾರಣೆ ಮಾಡಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಎಲ್ಲಾ ಉಪವಿಭಾಗಾಧಿಕಾರಿಗಳು ಅವರ ವ್ಯಾಪ್ತಿಯ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರ ಸಭೆ ಕರೆದು ಈ ಬಗ್ಗೆ ಮುಕ್ತವಾಗಿ ಚರ್ಚಿಸಿ, ಸಣ್ಣಪುಟ್ಟ ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸಬೇಕು.
ಪ್ರತಿ ತಿಂಗಳ 10ನೇ ತಾರೀಖಿನೊಳಗೆ ಎಲ್ಲಾ ತಾಲ್ಲೂಕುಗಳಲ್ಲಿ ಸಭೆಗಳನ್ನು ನಡೆಸಬೇಕು. ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಧಿಕಾರಿಗಳು , ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೂಚಿಸಿದ್ದಾರೆ.