ಲಂಚ ಪ್ರಕರಣ- ಬಿಜೆಪಿ ಶಾಸಕ ಮಾಡಾಳ್, ಪುತ್ರ ವಿರುದ್ಧ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ಆದೇಶ
ಬೆಂಗಳೂರು, ಮಾ.7: ಲಂಚ ಪ್ರಕರಣದಲ್ಲಿ ಆರೋಪಿಗಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಅವರ ಪುತ್ರ ಪ್ರಶಾಂತ್ ಮಾಡಾಳ್ ವಿರುದ್ಧ ಯಾವುದೇ ಮಾನಹಾನಿ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಾಧ್ಯಮ ಸಂಸ್ಥೆಗಳ ವಿರುದ್ಧ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.
ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ದಾಖಲಿಸಿರುವ ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಪೀಠ, ಈ ಆದೇಶ ಮಾಡಿದೆ.
ಮಾಧ್ಯಮ ಸಂಸ್ಥೆಗಳು, ಮಾಧ್ಯಮಗಳಲ್ಲಿ ಫಿರ್ಯಾದಿಗಳ ವಿರುದ್ಧ ಯಾವುದೇ ತೆರೆನಾದ ಮಾನಹಾನಿ ಅಭಿಪ್ರಾಯ ಪ್ರಸಾರ, ಪ್ರಚಾರ, ಅಭಿವ್ಯಕ್ತಿ ಮಾಡದಂತೆ ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳನ್ನು ಮುಂದಿನ ವಿಚಾರಣೆಯವರೆಗೆ ಯಾವುದೇ ತೆರನಾದ ಚರ್ಚೆ (ಪ್ಯಾನಲ್ ಡಿಸ್ಕಷನ್) ನಡೆಸದಂತೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಪ್ರತಿವಾದಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ವಿಚಾರಣೆಯನ್ನು ಎ.20ಕ್ಕೆ ಮುಂದೂಡಲಾಗಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿನ ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಅವರ ಪುತ್ರ ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಪ್ರಸ್ತುತ ಲಂಚ ಪಡೆದ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾನೆ.