ಕಾಂಗ್ರೆಸ್‌ನಿಂದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೋಸ: ಚಲವಾದಿ ನಾರಾಯಣ

ಉಡುಪಿ : ದಲಿತ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್‌ಗೆ ಮಾತ್ರ ಬಳಸಿಕೊಂಡಿರುವ ಕಾಂಗ್ರ್ರೆಸ್ ಇಂದು ತನ್ನದೇ ಮೋಸ ಜಾಲದಿಂದ ನಾಶಗೊಳ್ಳುತ್ತಿದೆ. ಬಹುಕಾಲದಿಂದ ನೊಂದ ಬೆಂದ ತುಳಿತಕ್ಕೊಳಗಾಗಿರುವ ಪ.ಜಾತಿ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯವಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣ ಸ್ವಾಮಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿಯಿಂದ ಮಾತ್ರ ಎಲ್ಲ ವರ್ಗಗಳ ಅಭಿವೃದ್ಧಿ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಮುಖ್ಯಮಂತ್ರಿ ಬಿ.ಎ.ಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ದಲಿತ ಸಮುದಾಯದ ಶ್ರೇಯೋಭಿವೃದ್ಧಿಗೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್‌ನ ಮೋಸ ಮತ್ತು ಬಿಜೆಪಿಯ ಅಭಿವೃದ್ಧಿ ಚಿಂತನೆಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಿ ಇನ್ನಷ್ಟು ದಲಿತ ಬಂಧುಗಳನ್ನು ಬಿಜೆಪಿ ಕಡೆಗೆ ಕರೆತರಬೇಕಾಗಿದೆ. ಸಂವಿಧಾನಾತ್ಮಕವಾಗಿ ದೊರೆತಿರುವ ಮೀಸಲಾತಿಯ ಸದ್ಬಳಕೆಯಿಂದ ಸಮಾಜ ಮತ್ತು ದೇಶ ಕಟ್ಟುವ ಕೆಲಸದಲ್ಲಿ ಎಲ್ಲರೂ ಕೈಜೋಡಿಸಬೇಕು. ರಾಜ್ಯದಲ್ಲಿ ಪಕ್ಷ ಸಂಘಟನಾ ಚಟುವಟಿಕೆಗಳಲ್ಲಿ ಎಸ್.ಸಿ. ಮೋರ್ಚಾ ಮುಂಚೂಣಿಯಲ್ಲಿದ್ದು ಮುಂಬರಲಿರುವ ಗ್ರಾಮ ಪಂಚಾಯತ್ ಸಹಿತ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸಲು ದಲಿತ ಸಮುದಾಯ ಕಂಕಣಬದ್ಧರಾಗಬೇಕು ಎಂದರು.

ಕಳೆದ 73 ವರ್ಷಗಳಿಂದ ದಲಿತರ ಉದ್ಧಾರ ಮಾಡಲಾಗದ ಕಾಂಗ್ರೆಸ್ ಕೇವಲ ಪ್ರಚಾರಕ್ಕಾಗಿ ಯೋಜನೆಗಳನ್ನು ರೂಪಿಸಿದೆ. ಬಿಜೆಪಿ ದಲಿತ ಸಮುದಾಯದ ಮೇಲಿನ ನೈಜ ಕಾಳಜಿಯಿಂದ ಯೋಜನೆಗಳನ್ನು ರೂಪಿಸಿ ಫಲಾನುಭವಿಗಳಿಗೆ ತಲುಪಿಸುತ್ತಿದೆ. ಕುಟುಂಬ ರಾಜಕಾರಣದಿಂದ ನಲುಗಿರುವ ಕಾಂಗ್ರೆಸ್ ಇನ್ನೆಂದೂ ಅಧಿಕಾರಕ್ಕೆ ಬರಲಾರದು. ಕಾಂಗ್ರೆಸ್ ಎಂಬುದು ಒಂದು ರಾಜಕೀಯ ಪಕ್ಷ ಅಲ್ಲ. ಈ ಹಿಂದೆ ಬ್ರಿಟಿಷರ ವಿರುದ್ಧ ದೇಶದ ಸ್ವಾತಂತ್ರ್ಯ ಚಳುವಳಿಗಾಗಿ ಹುಟ್ಟಿಕೊಂಡ ಸಂಘಟನೆ. ಕಾಂಗ್ರೆಸನ್ನು ಸ್ವಾತಂತ್ರ್ಯಾ ನಂತರ ಬರ್ಕಾಸ್ತುಗೊಳಿಸಬೇಕು ಎಂದು ಮಹಾತ್ಮಾ ಗಾಂಧಿ ಹೇಳಿದ್ದರು.

ಆದರೆ ನೆಹರೂ ಸಹಿತ ಈವರೆಗಿನ ಯಾವುದೇ ಕಾಂಗ್ರೆಸ್ ನಾಯಕರು ಗಾಂಧೀಜಿ ಮಾತಿಗೆ ಗೌರವ ನೀಡಲಿಲ್ಲ.ಆದರೆ ರಾಹುಲ್ ಗಾಂಧಿ ಮಾತ್ರ ಬಹಳ ಶೃದ್ಧೆಯಿಂದ ಗಾಂಧೀಜಿ ಮಾತನ್ನು ನೇರವೇರಿಸಿಯೇ ಸಿದ್ಧ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ವ್ಯಂಗವಾಡಿದ ಅವರು, ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸರಕಾರದಿಂದ ರೂ.10 ಬಿಡುಗಡೆಯಾದರೆ ರೂ.1 ಮಾತ್ರ ಜನತೆಗೆ ತಲುಪುತ್ತದೆ ಎಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೇಳಿದ್ದರು.

ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತದಲ್ಲಿ ಕಿಸಾನ್ ವಿಕಾಸ್‌ನಂತಹ ಯೋಜನೆಯಲ್ಲಿ ರೂ.6000 ನಗದು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾವಾಗುತ್ತದೆ. ಇದು ಬಿಜೆಪಿ ಪಾರದರ್ಶಕ ಆಡಳಿತದ ಕಾರ್ಯ ವೈಖರಿ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಹೇಮಂತ್ ಕುಮಾರ್ ನೂತನ ಅಧ್ಯಕ್ಷ ಗೋಪಾಲ ಕಳಂಜಿಯವರಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು. ಎಸ್.ಸಿ. ಮೋರ್ಚಾ ನೂತನ ಪದಾಧಿಕಾರಿಗಳನ್ನು ಗುರುತಿಸಲಾಯಿತು.

ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣ ಸ್ವಾಮಿ ಯವರನ್ನು ಜಿಲ್ಲಾ ಘಟಕದ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶಾಲು ಹೊದೆಸಿ ಸನ್ಮಾನಿಸಿದರು. ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಕಳಂಜಿಯವರನ್ನು ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿ.ಎಮ್. ಸುಕುಮಾರ ಶೆಟ್ಟಿ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಎಸ್.ಸಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ.ಸೇಸು ಎರ್ಮಾಳು, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಉಡುಪಿ ತಾ.ಪಂ. ನಿಕಟಪೂರ್ವ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಎಸ್.ಸಿ. ಮೋರ್ಚಾ ನಿಕಟಪೂರ್ವ ರಾಜ್ಯ ಕಾರ್ಯಕಾರಿಣಿ ಸದಸ್ಯ ವಾಸುದೇವ ಬನ್ನಂಜೆ ಹಾಗೂ ಎಸ್.ಸಿ. ಮೋರ್ಚಾ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಎಸ್.ಸಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಕೈಪುಂಜಾಲು ಸ್ವಾಗತಿಸಿ, ಎಸ್.ಸಿ. ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ ಡಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Leave a Reply

Your email address will not be published. Required fields are marked *

error: Content is protected !!