ಕನಿಷ್ಠ 150 ಸ್ಥಾನ ಗೆಲ್ಲಿ, ಇಲ್ಲದಿದ್ದರೆ ಆಪರೇಷನ್ ಕಮಲ ಮಾಡಬಹುದು: ರಾಹುಲ್ ಗಾಂಧಿ ಎಚ್ಚರಿಕೆ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಪ್ರಬಲ ಅಲೆ ಇದ್ದು, ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ನಾಯಕರ ಮೇಲೆ ಒತ್ತಡ ಹೇರಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 150 ಸ್ಥಾನಗಳನ್ನು ಗೆಲ್ಲಬೇಕು. ಇಲ್ಲದಿದ್ದರೆ ಮುಂದಿನ ಸರ್ಕಾರವನ್ನು ಭ್ರಷ್ಟ ಬಿಜೆಪಿ “ಕಳ್ಳತನ” ಮಾಡುತ್ತದೆ ಎಂದು ರಾಹುಲ್ ಗಾಂಧಿ ಅವರು ಪಕ್ಷ ನಾಯಕರಿಗೆ ಹೇಳಿದ್ದಾರೆ.
ಎರಡು ದಿನಗಳ ಭೇಟಿಗಾಗಿ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿದ್ದು, ಕೋಲಾರ, ಬೆಂಗಳೂರು ಮತ್ತು ಬೀದರ್‌ನಲ್ಲಿ ಪಕ್ಷದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇಂದಿರಾ ಗಾಂಧಿ ಭವನ ಉದ್ಘಾಟಿಸಿ ಮಾತನಾಡಿದ ರಾಹುಲ್ ಗಾಂಧಿ, ದ್ವೇಷ ಮತ್ತು ಹಿಂಸಾಚಾರ, ಸಂವಿಧಾನಾತ್ಮಕ ಸಂಸ್ಥೆಗಳ ಮೇಲಿನ ದಾಳಿಯ ವಿಷಯದಲ್ಲಿ ಬಿಜೆಪಿ ಏನು ಮಾಡುತ್ತಿದೆ ಎಂಬುದು ನಮ್ಮಲ್ಲಿ ಹೆಚ್ಚಿನವರಿಗೆ ತಿಳಿದಿದೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ ಎಂದರು.
ನಾವು ಈಗ ಕರ್ನಾಟಕದಲ್ಲಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಪ್ರಬಲ ಅಲೆ ಇರುವುದನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ ಮತ್ತು ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.