ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಸ್ಥಿತಿ ಗಂಭೀರ: ಮಣಿಪಾಲ್ ಆಸ್ಪತ್ರೆ ಪ್ರಕಟಣೆ
ಬೆಂಗಳೂರು: ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ(55) ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದಕ್ಕು ಮುನ್ನ ಮಾಧ್ಯಮಗಳು ಗಸ್ತಿ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದ್ದವು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಣಿಪಾಲ್ ಆಸ್ಪತ್ರೆ, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಶೋಕ್ ಗಸ್ತಿ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
ಸೆಪ್ಟೆಂಬರ್ 2ರಂದು ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂಲತಃ ಬಳ್ಳಾರಿ ಜಿಲ್ಲೆಯವರಾದ ಅಶೋಕ್ ಗಸ್ತಿ ಅವರು ಸವಿತಾ ಸಮಾಜಕ್ಕೆ ಸೇರಿದ್ದವರು. ಆರ್ ಎಸ್ಎಸ್‍ನ ಶಿಸ್ತಿನ ಸಿಪಾಯಿ ಆಗಿದ್ದ ಗಸ್ತಿ ಅವರನ್ನು ನಾಲ್ಕು ತಿಂಗಳ ಹಿಂದಷ್ಟೇ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.
ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 8ರಂದು ನಡೆಯಬೇಕಿದ್ದ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಾಗಿದ್ದ ಅಶೋಕ್ ಗಸ್ತಿ ಅವರನ್ನು ಕಣಕ್ಕಿಳಿಸಿತ್ತು ಮತ್ತು ಅವಿರೋಧವಾಗಿ ಆಯ್ಕೆಯಾಗಿದ್ದರು.