ಸರ್ಕಾರದ ಜನ ವಿರೋಧಿ ನೀತಿ: ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಇಂದು ಮತ್ತು ನಾಳೆ ಪ್ರತಿಭಟನೆ
ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆ ಜಾರಿಯ ಭರವಸೆಯೊಂದಿಗೆ ಈ ಬಾರಿ ವಿಧಾನಸಭೆ ಚುನಾವಣೆಯನ್ನು ಎದುರಿಸಿದ್ದ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರವಾಗಿದೆ. ಇಷ್ಟು ದಿನ ಸುಮ್ಮನಿದ್ದು ಪ್ರಮುಖ ಪ್ರತಿಪಕ್ಷ ಬಿಜೆಪಿ ಇದೇ ಮೊದಲ ಬಾರಿಗೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿಯಲು ಸಜ್ಜಾಗಿದೆ.
ಇಂದು ಮತ್ತು ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ರಾಜ್ಯ ಸರ್ಕಾರದ ಜನ ವಿರೋಧಿ ನಿರ್ಧಾರಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಇಂದು ಮತ್ತು ನಾಳೆ ಪ್ರತಿಭಟನೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ಇದ್ದಾಗ ಹಾಲಿನ ಪ್ರೋತ್ಸಾಹಧನವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ನೀಡುತ್ತಿತ್ತು. ಕಾಂಗ್ರೆಸ್ ಸರ್ಕಾರ ಅದರಲ್ಲಿ 1.5 ರೂಪಾಯಿ ಕಡಿಮೆ ಮಾಡಿದೆ. ಇದರಿಂದ ಬಡ ರೈತರಿಗೆ ತೊಂದರೆಯಾಗಲಿದೆ ಎಂದು ಆರೋಪಿಸಿದರು.