ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ- ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ…

ಬೆಂಗಳೂರು: (ಉಡುಪಿ ಟೈಮ್ಸ್ ವರದಿ) ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಯಾಗಿದೆ. ಮಹಿಳೆಯರು ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ನಿರೀಕ್ಷೆಯಲ್ಲಿದ್ದಾರೆ. ಇದೇ ಜೂನ್ 11 ರಿಂದ ಬಸ್ ಗಳಲ್ಲಿ ಉಚಿತ ಪ್ರಯಾಣ ಅವಕಾಶ ಲಭ್ಯವಾಗಲಿದೆ.

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕೆಲ ಷರತ್ತುಗಳನ್ನು ಕೂಡ ಮಹಿಳೆಯರಿಗೆ ವಿಧಿಸಲಾಗಿದೆ. ಇದರ ಪ್ರಕಾರ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಪಡೆಯುವುದು ಕಡ್ಡಾಯ ಆಗಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ.ವಿಎಸ್ ಅವರು ನಡವಳಿಗಳನ್ನು ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು, ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎಸಿ ಬಸ್&ಐಷಾರಾಮಿ) ಬಸ್‌ಗಳಲ್ಲಿ ಹೊರತುಪಡಿಸಿ ಉಚಿವಾಗಿ ಪ್ರಯಾಣಿಸಲು ಅವಕಾಶ ನೀಡಿರುತ್ತದೆ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಇರುವ ಶಕ್ತಿ ಯೋಜನೆಯ ಷರತ್ತುಗಳು…..

ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಈ ಯೋಜನೆಯು ಅನ್ವಯಿಸತಕ್ಕದ್ದು.
ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್ ಹಾಗೂ ವಜ್ರ, ವಾಯು ವಜ್ರ, ಐರಾವತ, ಐರಾವತ್ ಕ್ಲಬ್ ಕ್ಲಾಸ್, ಐರಾವತ ಗೋಲ್ಟ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎಸಿ ಬಸ್ ) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

ಶೇ.50ರಷ್ಟು ಆಸನಗಳು ಪುರುಷರಿಗೆ ಮೀಸಲು.
ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸ ತಕ್ಕದ್ದು.

ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಮುನ್ನ ಸರ್ಕಾರದ ಐಡಿ ಕಾರ್ಡ್ ತೋರಿಸಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸಬೇಕು.

ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ.?
ಇದಕ್ಕಾಗಿ ಮಹಿಳೆಯರಿಗೆ ಸೇವಾಸಿಂಧು ಪೋರ್ಟ್ ನಲ್ಲಿ ಅರ್ಜಿಯನ್ನು ಸರ್ಕಾರದಿಂದ ಕರೆಯಲಾಗುತ್ತದೆ. ಆಗ ಅರ್ಜಿಯನ್ನು ಸಲ್ಲಿಸಿ, ಪಡೆಯಬೇಕಾಗಿದೆ.

ಮೂರು ತಿಂಗಳೊಳಲಾಗಿ ಸರ್ಕಾರದಿಂದ ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಿದೆ.ಅದಕ್ಕೆ ಮೊದಲು ಜೂನ್.11ರಿಂದ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿದೆ. ಆದರೆ ಈ ವೇಳೆ ಮಹಿಳೆಯರು ಭಾರತ ಸರ್ಕಾರ, ಕರ್ನಾಟಕ ಸರ್ಕಾರದ ಇಲಾಖೆ, ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ತೋರಿಸಿ, ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!