ಕೇಂದ್ರದತ್ತ ಬೊಟ್ಟು ಮಾಡಿ ಜಾರಿಕೊಳ್ಳಬೇಡಿ -ಸುನಿಲ್ ಕುಮಾರ್

ಉಡುಪಿ: ನುಡಿದಂತೆ ನಡೆಯುತ್ತೇವೆ ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತೀರಾ ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ವಿ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡುವ ವಿಚಾರದಲ್ಲಿ ರಾಜಕಾರಣ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಅವರು, ನೀವು ಮತ ರಾಜಕಾರಣಕ್ಕಾಗಿ ಪ್ರಣಾಳಿಕೆ ಸಿದ್ದಪಡಿಸುವಾಗ‌ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿದ್ದಿರಾ? ಈ ಹಿಂದೆ ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ಕೊಟ್ಟ ಅಕ್ಕಿಯನ್ನೇ ನಾನು ಉಚಿತವಾಗಿ ಕೊಟ್ಟೆ ಎಂದು ಡೋಂಗಿ ಹೊಡೆದವರು ನೀವಲ್ಲವೇ ? ಎಂದು ಪ್ರಶ್ನಿಸಿದ್ದಾರೆ.

ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಕೊಟ್ಟ ಭರವಸೆ ಈಡೇರಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಈ ಹೊರೆಯಿಂದ ತಪ್ಪಿಸಿ ಕೊಳ್ಳುವುದಕ್ಕೆ ಈಗ ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎಂದು ಸಬೂಬು ಹೇಳುತ್ತಿದ್ದೀರಿ. ಕೇಂದ್ರ ಸರ್ಕಾರ ಕೊಡುತ್ತಿದ್ದ ಐದು ಕೆಜಿ ಅಕ್ಕಿ ಪೂರೈಕೆಯನ್ನು ಇದುವರೆಗೆ ನಿಲ್ಲಿಸಿಲ್ಲ. ಹೆಚ್ಚುವರಿ ಐದು ಕೆಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದು ನಿಮ್ಮ ವಾಗ್ದಾನ. ಅದರಂತೆ ನಡೆದುಕೊಳ್ಳಿ. ಅದನ್ನು ಬಿಟ್ಟು ಅಂಗಳ ಡೊಂಕು ಎಂದು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಕೀಳು ರಾಜಕಾರಣ ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.

ನಿಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವುದಕ್ಕಾಗಿ ಕೇಂದ್ರವನ್ನು ದೂಷಿಸುವ ಕೆಟ್ಟ ಚಾಳಿ ನಿಮಗೆ ಹೊಸದಲ್ಲ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಮೂಲಕ ಬಡವರ ಹಸಿವನ್ನು ನೀಗಿಸಿದ್ದು ಇದೇ ಕೇಂದ್ರ ಸರ್ಕಾರ ಎಂಬುದನ್ನು ಮರೆಯಬೇಡಿ ಎಂದು ಕಿವಿ ಮಾತು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!