ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಲ್ಲ: ಸಾಂಗ್ಲಿಯಲ್ಲಿ ಮೋದಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
ಸಾಂಗ್ಲಿ: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ‘ಸುಳ್ಳು’ ಹೇಳುವ ಪ್ರಧಾನಿಯನ್ನು ನೋಡಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ನಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ನರೇಂದ್ರ ಮೋದಿ ಸರ್ಕಾರವನ್ನು ಸೋಲಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ ಎಂದರು.
ಕರ್ನಾಟಕದಲ್ಲಿ ಹಿಂದೆ ಬಿಜೆಪಿ ಗೆದ್ದಿದ್ದು ಜನಾದೇಶದಿಂದಲ್ಲ, ಶಾಸಕರಿಗೆ ಹಣದ ಆಮಿಷ ಒಡ್ಡುವ ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದಿದ್ದರು ಎಂದು ತಿಳಿಸಿದ ಮುಖ್ಯಮಂತ್ರಿ, ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ-ದೇವೇಂದ್ರ ಫಡ್ನವೀಸ್ ಸರ್ಕಾರ ಕೂಡ ಭ್ರಷ್ಟವಾಗಿದೆ ಮತ್ತು ಅವರನ್ನು ಸೋಲಿಸುವುದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಕೆಲಸವಾಗಿದೆ ಎಂದು ಅವರು ಹೇಳಿದರು. ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ದೇಶ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನಾವೆಲ್ಲರೂ ಮತ್ತೊಂದು ಸ್ವಾತಂತ್ರ್ಯ ಹೋರಾಟವನ್ನು ನಡೆಸಬೇಕಾಗಿದೆ. ನಾನು ಮುಖ್ಯಮಂತ್ರಿಯಾಗಲು ಅಂಬೇಡ್ಕರ್ ಕಾರಣ. ಬಿಜೆಪಿಯವರು ಧರ್ಮ, ಪ್ರದೇಶ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಪ್ರಾರಂಭವಾಗಬೇಕಿದ್ದ ಐದು ಖಾತರಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದಂತೆ ಭಾರತೀಯ ಆಹಾರ ನಿಗಮಕ್ಕೆ ಬಿಜೆಪಿ ಹೇಳುತ್ತಿದೆ ಎಂದು ಸಿದ್ಧರಾಮಯ್ಯ ಆರೋಪಿಸಿದರು.
ಸಂವಿಧಾನವನ್ನು ಬದಲಾಯಿಸಲು ಕಾಂಗ್ರೆಸ್ ಎಂದಿಗೂ ಬಿಡುವುದಿಲ್ಲ ಮತ್ತು ಅದನ್ನು ರಕ್ಷಿಸಲು ಪಕ್ಷದ ಎಲ್ಲಾ ಕಾರ್ಯಕರ್ತರು ಯಾವುದೇ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಕರೆ ನೀಡಿದ ಸಿದ್ದರಾಮಯ್ಯ, ಸಾಂಗ್ಲಿಯ ಜತ್ ತಾಲೂಕಿನ ನೀರಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಜನರಿಗೆ ನೀರು ಸಿಗುವಂತೆ ಮಾಡುವುದಾಗಿ ಭರವಸೆ ನೀಡಿದರು.